ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಗರ ತಾಲ್ಲೂಕಿಗೆ ಮತ್ತೊಂದು ಬಂಪರ್ ಗಿಫ್ಟ್ ನೀಡಿದ್ದು, ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಒಟ್ಟು 50 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಹಸಿರು ನಿಶಾನೆ ನೀಡಲಾಗಿದೆ. ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕೃತ ಆದೇಶವೂ ಬಿಡುಗಡೆಯಾಗಿದೆ.
ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಮನವಿಗೆ ಸ್ಪಂದಿಸಿದ ಸಿಎಂ, ವಿವಿಧ ಇಲಾಖೆಗಳ ಮೂಲಕ ತಾಲ್ಲೂಕಿನಲ್ಲಿ ಮೂಲಸೌಕರ್ಯ ವೃದ್ಧಿಗೆ ಈ ಅನುದಾನವನ್ನು ಮಂಜೂರು ಮಾಡಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಈ ಕುರಿತು ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ ಪತ್ರ ಬರೆದು ಮಾಹಿತಿ ನೀಡಿದ್ದಾರೆ.
50 ಕೋಟಿಯ ಅನುದಾನ ಹೀಗಿದೆ:
| ಇಲಾಖೆ | ಅನುದಾನ (ಕೋಟಿ ರೂ.) |
|---|---|
| ಲೋಕೋಪಯೋಗಿ ಇಲಾಖೆ | 12.00 |
| ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ | 29.25 |
| ಹಿಂದುಳಿದ ವರ್ಗಗಳ ಇಲಾಖೆ | 5.25 |
| ಮುಜರಾಯಿ ಇಲಾಖೆ | 3.50 |
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ-ಮೂಲಸೌಕರ್ಯ, ಗ್ರಾಮೀಣ ಅಭಿವೃದ್ಧಿ, ಹಿಂದುಳಿದ ವರ್ಗಗಳ ಸೌಲಭ್ಯಗಳು ಹಾಗೂ ದೇವಾಲಯಗಳ ಅಭಿವೃದ್ಧಿಗೆ ಈ ಅನುದಾನವನ್ನು ಬಳಸಿಕೊಳ್ಳಲಾಗುತ್ತದೆ. ಮುಖ್ಯಮಂತ್ರಿಗಳ ಅನುಮೋದನೆಯ ನಂತರ ಆರ್ಥಿಕ ಇಲಾಖೆ ಪ್ರಕಟಿಸಿದ ಈ ಆದೇಶದಿಂದ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.
