ಬೆಂಗಳೂರು: ಎಟಿಎಂ ಯಂತ್ರಗಳಿಗೆ ತುಂಬಿಸಲು ಕೊಂಡೊಯ್ಯುತ್ತಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಸಿಎಂಎಸ್ ಸೆಕ್ಯುರಿಟೀಸ್ ಕಸ್ಟೋಡಿಯನ್ ವಾಹನದ ಮೇಲ್ವಿಚಾರಕ ರವಿ, ಮಾಜಿ ಉದ್ಯೋಗಿ ಕ್ಸೇವಿಯರ್ ಹಾಗೂ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬವರನ್ನು ಬಂಧಿಸಲಾಗಿದೆ. ಅವರಿಂದ 5.76 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣ ವರದಿಯಾದ 54 ಗಂಟೆಗಳೊಳಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಕೃತ್ಯದಲ್ಲಿ ಆರರಿಂದ 8 ಜನರು ಶಾಮೀಲಾಗಿರುವ ಸಾಧ್ಯತೆಯಿದೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಮೂರು ತಿಂಗಳಿಂದ ದರೋಡೆಗೆ ಸಂಚು: ಮೂರು ತಿಂಗಳುಗಳಿಂದ ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳು, ಕೃತ್ಯಕ್ಕೆ 15 ದಿನಗಳಿಂದಲೂ ಸ್ಥಳವನ್ನು ನಿಗದಿ ಮಾಡಿದ್ದರು. ನವೆಂಬರ್ 19ರಂದು 12:48ರ ಸುಮಾರಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಕಾರಿನಲ್ಲಿ ಅಶೋಕ ಪಿಲ್ಲರ್ – ಜಯನಗರ – ಡೇರಿ ಸರ್ಕಲ್ ಮಾರ್ಗದಲ್ಲಿ ಬಂದು, ಕಸ್ಟೋಡಿಯನ್ ವಾಹನವನ್ನು ಅಡ್ಡಗಟ್ಟಿ ತಾವು ಆರ್‌ಬಿಐ ನಿಯಂತ್ರಣಾಧಿಕಾರಿಗಳೆಂದು ಭದ್ರತಾ ಸಿಬ್ಬಂದಿ ಹಾಗೂ ಕಸ್ಟೋಡಿಯನ್ ಸಿಬ್ಬಂದಿಯನ್ನು ಕೆಳಗಿಳಿಸಿದ್ದರು. ನಂತರ ಮತ್ತೋರ್ವ ಆರೋಪಿ ಕಸ್ಟೋಡಿಯನ್ ವಾಹನದೊಳಗೆ ಕುಳಿತು ಚಾಲಕನಿಗೆ ಡೇರಿ ಸರ್ಕಲ್‌ನತ್ತ ಚಲಾಯಿಸುವಂತೆ ಸೂಚಿಸಿದ್ದ ಎಂದು ಆಯುಕ್ತರು ವಿವರಿಸಿದರು.
ಸೆಕ್ಯುರಿಟಿ ಏಜೆನ್ಸಿಯಿಂದಲೂ ಲೋಪದೋಷ: ಹಣ ಸಾಗಿಸುವ ವಾಹನದಲ್ಲಿ ಚಾಲಕನನ್ನು ಹೊರತುಪಡಿಸಿ ಇಬ್ಬರು ಭದ್ರತಾ ಸಿಬ್ಬಂದಿ ಹಾಗೂ ಇಬ್ಬರು ಕಸ್ಟೋಡಿಯನ್ ಸಿಬ್ಬಂದಿ ಇರಬೇಕು. ಕಸ್ಟೋಡಿಯನ್ ವಾಹನ ಒಂದೇ ಸಮಯ, ಒಂದೇ ಮಾರ್ಗವನ್ನು ಪದೇ ಪದೆ ಬಳಸಬಾರದು. ಸಿಬ್ಬಂದಿಯು ಹಣ ನಿರ್ವಹಣೆಯ ಕುರಿತು ತರಬೇತಿ ಪಡೆದಿರಬೇಕು, ಸಿಬ್ಬಂದಿಯ ಹಿನ್ನೆಲೆಯ ಕುರಿತು ಪರಿಶೀಲನೆ ಆಗಿರಬೇಕು.
ಹಾಗೂ ಕಸ್ಟೋಡಿಯನ್ ಕಂಪನಿಯ ಯಾವುದೇ ಉದ್ಯೋಗಿಯನ್ನು ಕೆಲಸದಿಂದ ವಜಾಗೊಳಿಸಿದರೆ ಪೊಲೀಸರಿಗೆ ಮಾಹಿತಿ ನೀಡಿರಬೇಕು ಎಂದು ಆರ್‌ಬಿಐ ನಿಯಮಾವಳಿಗಳು ಸೂಚಿಸುತ್ತವೆ. ಆದರೆ ಇಲ್ಲಿ ಸಿಎಂಎಸ್ ಸೆಕ್ಯುರಿಟೀಸ್ ಕಂಪನಿಯವರಿಂದ ಕೆಲ ಲೋಪದೋಷಗಳಾಗಿರುವುದು ಕಂಡು ಬಂದಿದೆ. ಆರ್‌ಬಿಐಗೆ ಪತ್ರ ಬರೆಯಲಾಗುವುದು ಎಂದು ಆಯುಕ್ತರು ಇದೇ ವೇಳೆ ಮಾಹಿತಿ ಹಂಚಿಕೊಂಡರು.
