ಬೆಂಗಳೂರು : ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಶನಿವಾರ ಸಾಮಾನ್ಯವಾಗಿತ್ತು. ಇದರಿಂದ ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಮಳೆಯಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.
ನ.24ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ನ.25ರಿಂದ 29ರವರೆಗೆ ಕರಾವಳಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
