ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ಚಾಲಕನೊಬ್ಬ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ನಾಗಪ್ಪ (54) ಚಿಕಿತ್ಸೆ ಫಲಿಸದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಾಲ್ಕು ದಿನಗಳ ಬಳಿಕ ಮೃತಪಟ್ಟಿದ್ದಾರೆ.
ಮೃತ ನಾಗಪ್ಪ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ತ್ಯಾಗರ್ತಿ ಗ್ರಾಮ ನಿವಾಸಿಯಾಗಿದ್ದು, ಕೆಎಸ್‌ಆರ್‌ಟಿಸಿಯಲ್ಲಿ ಬಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಒಂದೂವರೆ ತಿಂಗಳಿಂದ ಡಿಪೋ ಮ್ಯಾನೇಜರ್ ಡ್ಯೂಟಿ ನೀಡದೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ. ಹಲವು ಬಾರಿ ಡ್ಯೂಟಿ ಸಿಗದೆ ಮನೆಗೆ ವಾಪಸ್ಸು ಬಂದಿದ್ದ ನಾಗಪ್ಪ ಇದರಿಂದ ತೀವ್ರವಾಗಿ ಮನನೊಂದಿದ್ದರು ಎನ್ನಲಾಗಿದೆ.
ಡ್ಯೂಟಿ ಸಿಗದ ಬೇಸರದಿಂದ ಕಳೆದ ಸೋಮವಾರ ನಾಗಪ್ಪ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ.
ಇದೇ ವೇಳೆ ಕೆಎಸ್‌ಆರ್‌ಟಿಸಿ ನೌಕರರು ಮೃತ ಚಾಲಕ ನಾಗಪ್ಪನ ಅಂತಿಮ ದರ್ಶನ ಪಡೆದರು. ನಂತರ ಮೃತದೇಹವನ್ನು ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಕೊಂಡೊಯ್ಯಲಾಯಿತು. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
