ಭದ್ರಾವತಿ: ಸಮಾಜದಲ್ಲಿ ಸತ್ಯದ ಧ್ವನಿಯಾಗಿ ಪತ್ರಿಕೋದ್ಯಮ ಉಳಿಯಬೇಕಾದರೆ ಪತ್ರಕರ್ತರು ವಿಶ್ವಾಸಾರ್ಹತೆ, ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳನ್ನು ಬಲವಾಗಿ ಹಿಡಿದುಕೊಂಡು ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು.
ನಗರದ ಹಳೇನಗರದ ಪತ್ರಿಕಾಭವನದಲ್ಲಿ ಭಾನುವಾರ ನಡೆದ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿ, ಪತ್ರಿಕೆಗಳನ್ನು ನಡೆಸುವುದು ಇಂದಿನ ದಿನಗಳಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ತಪ್ಪು ಮಾಹಿತಿ, ಅತಿರೇಕ ಮತ್ತು ವದಂತಿಗಳ ನಡುವೆಯೇ ನಿಖರ ಸುದ್ದಿಯನ್ನು ಜನರಿಗೆ ತಲುಪಿಸುವ ಹೊಣೆಗಾರಿಕೆ ಪತ್ರಕರ್ತರ ಮೇಲಿದೆ ಎಂದು ಹೇಳಿದರು.
ಪತ್ರಕರ್ತರ ವಿಶ್ವಾಸಾರ್ಹತೆಯೇ ಮಾಧ್ಯಮದ ಶಕ್ತಿ. ಪ್ರತಿಯೊಂದು ಸುದ್ದಿಯೂ ಸಮಾಜದ ಮೇಲೆ ಪರಿಣಾಮ ಬೀರುತ್ತದೆ ಎಂಬ ಅರಿವಿನಿಂದ ವರದಿಗಾರಿಕೆ ನಡೆಯಬೇಕು. ಈ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಸಂಘವನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ ಮಾದರಿಯಾಗಬೇಕೆಂದು ಕರೆ ನೀಡಿದರು. ಪತ್ರಕರ್ತರ ಹಿತಕ್ಕಾಗಿ ತಾವು ಸದಾ ಬೆಂಬಲವಾಗಿ ನಿಲ್ಲುವುದಾಗಿ ಭರವಸೆ ನೀಡಿದರು.

ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ಮಾತನಾಡಿ, ಪತ್ರಕರ್ತರು ರಾಜಕೀಯ ವ್ಯವಸ್ಥೆಗೆ ಕನ್ನಡಿ ಹಿಡಿಯುವ ಕೆಲಸ ಮಾಡಬೇಕು. ಸಮಾಜದಲ್ಲಿರುವ ಸಮಸ್ಯೆಗಳನ್ನು ನಿರ್ಭಯವಾಗಿ ಹೊರತರುವ ಮೂಲಕ ಆಡಳಿತವನ್ನು ಸದಾ ಎಚ್ಚರದಲ್ಲಿರಿಸುವ ಹೊಣೆಗಾರಿಕೆ ಮಾಧ್ಯಮದ ಮೇಲಿದೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ನಗರಸಭೆ ಅಧ್ಯಕ್ಷೆ ಜೆ.ಸಿ. ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ರಾಜ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್ (ಟೆಲೆಕ್ಸ್), ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಎಸ್. ಹಾಲಸ್ವಾಮಿ, ಖಜಾಂಚಿ ರೋಹಿತ್ ರಂಗಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಹಾಗೂ ತಾಲೂಕು ಚುನಾವಣಾ ಉಸ್ತುವಾರಿ ದೇಶಾದ್ರಿ ಹೊಸ್ಮನೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನೂತನ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧ್ಯಕ್ಷ ಎಚ್.ಯು. ವೈದ್ಯನಾಥ ಪ್ರಮಾಣವಚನ ಬೋಧಿಸಿದರು. ಹಿರಿಯ ಪತ್ರಕರ್ತ ಎನ್. ಬಾಬು ಸ್ವಾಗತಿಸಿ, ಜಿ. ಸುಭಾಷ್ರಾವ್ ಸಿಂಧ್ಯಾ ನಿರೂಪಿಸಿದರು.
ನೂತನ ಪದಾಧಿಕಾರಿಗಳಾಗಿ ಉಪಾಧ್ಯಕ್ಷ ಜಿ. ಸುಭಾಷ್ರಾವ್ ಸಿಂಧ್ಯಾ, ಕಾರ್ಯದರ್ಶಿ ಅನಂತಕುಮಾರ್, ಖಜಾಂಚಿ ಆರ್. ಫಿಲೋಮಿನಾ ಸೇರಿದಂತೆ ಎಂಟು ಮಂದಿ ಕಾರ್ಯಕಾರಿ ಸಮಿತಿ ಸದಸ್ಯರು ಪದಗ್ರಹಣ ಸ್ವೀಕರಿಸಿದರು. ವಿವಿಧ ರಾಜಕೀಯ ಪಕ್ಷಗಳು, ಸಂಘ–ಸಂಸ್ಥೆಗಳ ಪ್ರತಿನಿಧಿಗಳು, ಮುಖಂಡರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
