Trending

SSLC ಪರೀಕ್ಷೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ : ಶಿಕ್ಷಕರಿಗೂ ಮೊಬೈಲ್ ಬಳಕೆ ನಿಷೇಧ

Spread the love

ಬೆಂಗಳೂರು: ರಾಜ್ಯದಲ್ಲಿನ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮಾರ್ಗಸೂಚಿಯಂತೆ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮೊಬೈಲ್ ಫೋನ್ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿರುವ ಸುತ್ತೋಲೆಯ ಪ್ರಕಾರ, ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ–1 ಅನ್ನು ದಿನಾಂಕ 05.01.2026 ರಿಂದ 10.01.2026 ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಗೆ ಮುಖ್ಯ ಪರೀಕ್ಷೆಯ ಮಾದರಿಯಲ್ಲೇ ಪ್ರಶ್ನೆಪತ್ರಿಕೆಗಳನ್ನು ಮಂಡಲಿಯಿಂದ ಸಿದ್ಧಪಡಿಸಲಾಗಿದ್ದು, ಪರೀಕ್ಷಾ ದಿನದಂದು ಬೆಳಿಗ್ಗೆ 07.00 ಗಂಟೆಗೆ ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಶಾಲಾ ಲಾಗಿನ್‌ಗೆ ವಿಷಯವಾರು ಪ್ರಶ್ನೆಪತ್ರಿಕೆಗಳನ್ನು ಅಪ್‌ಲೋಡ್ ಮಾಡಲಾಗಿತ್ತು.

ಡೌನ್‌ಲೋಡ್ ಮಾಡಲಾಗುವ ಪ್ರತಿಯೊಂದು ಪ್ರಶ್ನೆಪತ್ರಿಕೆಯ ಮೇಲೂ ಸಂಬಂಧಿಸಿದ ಶಾಲೆಯ ಸಂಕೇತದ ವಾಟರ್‌ಮಾರ್ಕ್ ಅಳವಡಿಸಲಾಗಿತ್ತು. ಪ್ರಶ್ನೆಪತ್ರಿಕೆಗಳು ಪರೀಕ್ಷೆಗೆ ಮುನ್ನ ಅಥವಾ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಸೋರಿಕೆಯಾದಲ್ಲಿ ಸಂಬಂಧಿಸಿದ ಶಾಲಾ ಮುಖ್ಯಶಿಕ್ಷಕರ ಮೇಲೆ ಹಾಗೂ ಸಹಕರಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಇಲಾಖೆಯು ಸ್ಪಷ್ಟಪಡಿಸಿತ್ತು.

ಆದರೆ, ಪೂರ್ವಸಿದ್ಧತಾ ಪರೀಕ್ಷೆ–1ರಲ್ಲಿ ಕೆಲ ಮುಖ್ಯೋಪಾಧ್ಯಾಯರು ಪ್ರಶ್ನೆಪತ್ರಿಕೆಯನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಡೌನ್‌ಲೋಡ್ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಪತ್ತೆಯಾಗಿದೆ. ಈ ಅಕ್ರಮದಿಂದ ಶಿಕ್ಷಣ ಇಲಾಖೆಗೆ ತೀವ್ರ ಮುಜುಗರ ಉಂಟಾಗಿದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ, ಈಗಾಗಲೇ ಸೈಬರ್, ಆರ್ಥಿಕ ಹಾಗೂ ಮಾದಕ ಅಪರಾಧಗಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತಪ್ಪಿತಸ್ಥರಾದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಇದೀಗ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ–2 ಮತ್ತು 3 ಅನ್ನು ಆಯುಕ್ತರ ಕಚೇರಿಯ ನೇರ ಮೇಲ್ವಿಚಾರಣೆಯಲ್ಲಿ ನಡೆಸಲಾಗುತ್ತಿದೆ. ಪರೀಕ್ಷಾ ಮೇಲ್ವಿಚಾರಣೆಗೆ ಪ್ರೌಢ ಶಿಕ್ಷಣ ನಿರ್ದೇಶಕರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

[pj-news-ticker]