ಭದ್ರಾವತಿ: ಮುಂದಿನ ಎರಡು–ವರೆ ತಿಂಗಳೊಳಗೆ ವಿಶ್ವೇಶ್ವರಯ್ಯ ಸ್ಟೀಲ್ ಕಂಪನಿಯನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವುದಾಗಿ ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು.
ಅವರು ಇಂದು ನಗರದ ಹುಡ್ಕೋ ಕಾಲೋನಿ ವಿಐಎಸ್ಎಲ್ ಹೆಲಿಪ್ಯಾಡ್ ಆವರಣದಲ್ಲಿ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.
ಕೈಗಾರಿಕಾ ಚಟುವಟಿಕೆಗಳಿಗೆ ಪುನಶ್ಚೇತನ ನೀಡುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದ ಅವರು, ವಿಶ್ವೇಶ್ವರಯ್ಯ ಸ್ಟೀಲ್ ಕಂಪನಿ ಆರಂಭಕ್ಕೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಶೀಘ್ರದಲ್ಲೇ ಸ್ಪಷ್ಟ ಫಲಿತಾಂಶ ದೊರೆಯಲಿದೆ ಎಂದು ಭರವಸೆ ನೀಡಿದರು.
ಕೇಂದ್ರ ಸರ್ಕಾರದ ಆರ್ಥಿಕ ಯೋಜನೆಗಳಲ್ಲಿ ಭದ್ರಾವತಿಗೆ ಅನುಕೂಲವಾಗುವ ರೀತಿಯಲ್ಲಿ ಪರಿಹಾರ ಮತ್ತು ಬೆಂಬಲ ಒದಗಿಸಲಾಗುವುದು ಎಂದು ಹೇಳಿದರು. ಕೈಗಾರಿಕೆ ಪುನರಾರಂಭದಿಂದ ಉದ್ಯೋಗಾವಕಾಶಗಳು ಹೆಚ್ಚಾಗಲಿದ್ದು, ಸ್ಥಳೀಯ ಆರ್ಥಿಕತೆಗೆ ಬಲ ಸಿಗಲಿದೆ ಎಂದು ಕುಮಾರಸ್ವಾಮಿ ಹೇಳಿದರು.
ಉಡುಪಿಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮಾತನಾಡಿ,ತರಳಬಾಳು ಹುಣ್ಣಿಮೆ ಮಹೋತ್ಸವವು ಪ್ರತಿವರ್ಷ ನೈತಿಕ ಮತ್ತು ಮಾನವೀಯ ಮೌಲ್ಯಗಳನ್ನು ಪುನಃಶ್ಚೇತನಗೊಳಿಸುವ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿ ರೂಪುಗೊಳ್ಳುತ್ತಿದೆ. ಮಹೋತ್ಸವವು ಕೇವಲ ಧಾರ್ಮಿಕ ಆಚರಣೆಯಾಗದೆ, ಬೌದ್ಧಿಕ ಮತ್ತು ಸಾಂಸ್ಕೃತಿಕ ಚಿಂತನೆಗೆ ವೇದಿಕೆಯಾಗಿದ್ದು, ದೇಶಸೇವೆ ಹಾಗೂ ಈಶಸೇವೆಯನ್ನು ಒಟ್ಟಾಗಿ ನಡೆಸುವ ಸಂದೇಶವನ್ನು ಸಾರುತ್ತಿದೆ ಎಂದು ತಿಳಿಸಿದರು.
ದಿವ್ಯಸಾನಿಧ್ಯ ವಹಿಸಿದ್ದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ,ಸಿರಿಗೆರೆ ಮಠವು ಧಾರ್ಮಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ನಾಡಿಗೆ ತನ್ನದೇ ಆದ ಮಹತ್ವದ ಕೊಡುಗೆ ನೀಡಿರುವುದನ್ನು ಸ್ಮರಿಸಿದರು. ರೈತರಿಗೆ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಹಲವು ಯೋಜನೆಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿಗಳು ಬಜೆಟ್ ಮಂಡನೆ ವೇಳೆ ಮಠಮಾನ್ಯಗಳಿಗೆ ಅನುದಾನ ನೀಡುವ ಬದಲು ಸಿರಿಗೆರೆ ಸುತ್ತಮುತ್ತಲಿನ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವಂತೆ ಮನವಿ ಮಾಡಿದ್ದಾಗಿ ಹೇಳಿದರು. ಅದರ ಫಲವಾಗಿ ೨೫ ಕೋಟಿ ರೂ. ಅನುದಾನ ಮಂಜೂರಾಗಿದ್ದು, ಭರಮಸಾಗರ, ಹಳೇಬೀಡು ಹಾಗೂ ಜಗಳೂರು ಏತನೀರಾವರಿ ಯೋಜನೆಗಳಿಗೆ ಹಣ ಮಂಜೂರು ಮಾಡಿರುವುದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ , ಸಂಸದ ಗೋವಿಂದ ಕಾರಜೋಳ, ಶಾಸಕಿ ಶಾರದಾ ಪೂರ್ಯ ನಾಯ್ಕ್, ಶಾಸಕ ಬಿ.ಕೆ ಸಂಗಮೇಶ್ವರ್, ಜಾನಪದ ವಿದ್ವಾಂಸರಾದ ಪ್ರೊ.ಶಂಭು.ವಿ.ಬಳಿಗಾರ, ಕುಲಪತಿಗಳಾದ ಪ್ರೊ.ಶರತ್ಅನಂತಮೂರ್ತಿ, ಸಾಹಿತಿ ಶುಭಮರವಂತೆ, ಚಿತ್ರನಟ ಅರುಣ್ಸಾಗರ್, ಗೀತಾ ರಾಜಕುಮಾರ್ ಹಾಗೂ ಅಪಾರ ಸಂಖ್ಯೆಯ ಭಕ್ತಾಧಿಗಳು ಇದ್ದರು.
