ಶಿವಮೊಗ್ಗ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಅನುದಾನವನ್ನು ಇತರೆ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಎಸ್ಸಿ–ಎಸ್ಟಿ ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಸುಮಾರು 42,000 ಕೋಟಿ ರೂ. ಮೊತ್ತದಲ್ಲಿ 25,000 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಸರ್ಕಾರವೇ ರೂಪಿಸಿರುವ ಕಾಯ್ದೆಯನ್ನು ಸರ್ಕಾರವೇ ಉಲ್ಲಂಘಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇತ್ತೀಚೆಗೆ ಹುಬ್ಬಳ್ಳಿ ಸಮೀಪದ ಇನಾಂ ವೀರಾಪುರ ಗ್ರಾಮದಲ್ಲಿ ದಲಿತ ಯುವಕನೊಬ್ಬ ಮೇಲ್ಜಾತಿಯ ಯುವತಿಯನ್ನು ಪ್ರೀತಿಸಿದ್ದ ಕಾರಣಕ್ಕೆ ನಡೆದ ಅಮಾನವೀಯ ಘಟನೆ ದೇಶದಲ್ಲಿ ಜಾತಿ ದೌರ್ಜನ್ಯ ಯಾವ ಮಟ್ಟದಲ್ಲಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಏಳು ತಿಂಗಳ ಗರ್ಭಿಣಿಯಾಗಿದ್ದ ಮಗಳನ್ನು ತಂದೆಯೇ ಹತ್ಯೆ ಮಾಡಿದ ಘಟನೆ ಕೇವಲ ಒಂದು ಊರಿನ ಸಮಸ್ಯೆಯಲ್ಲ, ಇಡೀ ದೇಶದ ಸ್ಥಿತಿಯ ಪ್ರತಿಬಿಂಬ ಎಂದು ಆಕ್ರೋಶ ವ್ಯಕ್ತಪಡಿಸಿದರು.
2026–27ರ ರಾಜ್ಯ ಬಜೆಟ್ನಲ್ಲಿ ದಲಿತರ ಜನಸಂಖ್ಯೆಗೆ ಅನುಗುಣವಾಗಿ ಶೇ. 24.1 ರಷ್ಟು ಅನುದಾನ ಮೀಸಲಿಡಬೇಕು. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪ ಅವರಿಗೆ ಸರ್ಕಾರ “ಕರ್ನಾಟಕ ರತ್ನ” ಪ್ರಶಸ್ತಿ ಘೋಷಿಸಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ–ವರ್ಗಗಳ ಭೂ ಪರಭಾರೆ ನಿಷೇಧ ಕಾಯ್ದೆ (ಪಿಟಿಸಿಎಲ್) ಸೆಕ್ಷನ್ 3(1)(ಬಿ)ಯಲ್ಲಿರುವ ಅಸ್ಪಷ್ಟ ಪದಗಳನ್ನು ತಿದ್ದುಪಡಿ ಮಾಡಬೇಕು. ಡಾ. ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಮಾಡಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಗಂಗಾ ಕಲ್ಯಾಣ, ಭೂ ಒಡೆತನ, ನೇರ ಸಾಲ, ಉದ್ಯಮಶೀಲತಾ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಗಳ ಘಟಕ ವೆಚ್ಚವನ್ನು ದ್ವಿಗುಣಗೊಳಿಸಿ ಗುರಿ ಹೆಚ್ಚಳ ಮಾಡಬೇಕು. ವಸತಿ ಶಾಲೆಗಳನ್ನು ವಸತಿ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಬೇಕು. ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚವನ್ನು ಬೆಲೆ ಏರಿಕೆಗೆ ಅನುಗುಣವಾಗಿ 3,000 ರೂ.ವರೆಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಕಳೆದ ಐದು ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು. ದೇವದಾಸಿ, ವಿಧವಾ ಮಹಿಳೆಯರು, ವೃದ್ಧರು ಹಾಗೂ ವಿಕಲಚೇತನರಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು 5,000 ರೂ.ವರೆಗೆ ಹೆಚ್ಚಿಸಬೇಕು ಸೇರಿದಂತೆ ಒಟ್ಟು 17ಕ್ಕೂ ಹೆಚ್ಚು ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಜಿಲ್ಲಾ ಸಂಚಾಲಕ ಏಳುಕೋಟಿ, ಶಿವಬಸಪ್ಪ, ಹರಿಗೆ ರವಿ, ಚಂದ್ರಪ್ಪ ಜೋಗಿ, ಕೃಷ್ಣ ಬೊಮ್ಮನಕಟ್ಟೆ, ಎಂ. ರಮೇಶ್ ಚಿಕ್ಕಮರಡಿ, ನಾಗರಾಜ್ ಕಾಚಗೊಂಡನಹಳ್ಳಿ, ಜಗದೀಶ್ ಚರ್ಚಿಗುಂಡಿ, ಬಸವರಾಜ್ ಹಸ್ವಿ, ಯಡವಾಲ ಹನುಮಂತಪ್ಪ, ಮನ್ಸೂರ್ ಲಕ್ಕವಳ್ಳಿ, ಚೇತನ್ ಕುಮಾರ್ ಹಸೂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
