ಶಿವಮೊಗ್ಗ: ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ, ಬಂಜಾರ ಸಂಘದ ವತಿಯಿಂದ ನಗರದಲ್ಲಿ ಭಾರಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಕೈಗೆ ಕಪ್ಪು ಪಟ್ಟಿ ಧರಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ಒಳ ಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಮೋಸ ಮಾಡಲಾಗಿದೆ, ಮರಣ ಶಾಸನ ಬರೆದಂತಾಗಿದೆ” ಎಂದು ಘೋಷಣೆ ಕೂಗಿ ತಮ್ಮ ಅಸಮಾಧಾನ ಹೊರಹಾಕಿದರು.
ನಗರದ ಬಂಜಾರ ಕನ್ವೆನ್ಷನ್ ಹಾಲ್‌ನಿಂದ ಕುವೆಂಪು ರಂಗಮಂದಿರದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ರಂಗಮಂದಿರಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಘೋಷಣೆಗಳು ಕೇಳಿಬಂದವು.
ಅದೇ ವೇಳೆ ರಂಗಮಂದಿರದಲ್ಲಿ ಸೇವಾಲಾಲ್ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದ ಹಿನ್ನೆಲೆ ಪರಿಸ್ಥಿತಿ ಉದ್ವಿಗ್ನಗೊಂಡಿತು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
