ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಭಾನುವಾರ 5 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದ್ದು , ಅಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ.
ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರಕ್ಕೆ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಟಿಕೆಟ್ ನೀಡಲಾಗಿದೆ. ರಾಯಚೂರು ಎಸ್ ಟಿ ಮೀಸಲು ಕ್ಷೇತ್ರದಲ್ಲಿ ರಾಜ ಅಮರೇಶ್ವರ ನಾಯಕ್ ಅವರಿಗೆ ಟಿಕೆಟ್ ನೀಡಲಾಗಿದೆ.
ಚುನಾವಣೆಗೆ ಸಿದ್ಧತೆ ನಡೆಸಿದ್ದ ಅನಂತ್ ಕುಮಾರ್ ಹೆಗಡೆ ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.
ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಪ್ರತಿನಿಧಿಸುತ್ತಿರುವ ಚಿತ್ರದುರ್ಗ ಎಸ್ ಸಿ ಮೀಸಲು ಕ್ಷೇತ್ರಕ್ಕೆ ಅಭ್ಯರ್ಥಿ ಇನ್ನಷ್ಟೇ ಘೋಷಿಸಬೇಕಿದೆ. ಬಿಜೆಪಿ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ, ಕೋಲಾರವನ್ನು ಮಿತ್ರ ಪಕ್ಷ ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ.