ದಾವಣಗೆರೆ: ಉಪ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು, ಕಾಂಗ್ರೆಸ್ನಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎಂಬ ಚರ್ಚೆ ನಡೆಯುತ್ತಿದೆ.
ಆದರೆ, ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮುನ್ನವೇ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿರುವುದು ಕಂಡುಬಂದಿದೆ.
ತಾಯಿ ಪ್ರಭಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನರು, ನಮ್ಮ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಇದೀಗ ಟಿಕೆಟ್ ಘೋಷಣೆಯಾಗುವ ಮೊದಲೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಪಕ್ಷವನ್ನು ಗೊಂದಲಕ್ಕೆ ಸಿಲುಕಿಸಿದ್ದಾರೆ.
ಸಮರ್ಥ್ ಶಾಮನೂರು ಅವರು ಒಂದಲ್ಲ ಎರಡು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪಕ್ಷದಿಂದ ಒಂದು ನಾಮಪತ್ರ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತೊಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ, ಶಾಮನೂರು ಕುಟುಂಬದ ನಡೆ ಭಾರೀ ಕುತೂಹಲ ಮೂಡಿಸಿದೆ.
ಜ್ಯೋತಿಷ್ಯರ ಸಲಹೆ ಮೇರೆಗೆ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಅಮೃತ ಸಿದ್ದಿಯೋಗದ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಜೋತಿಷ್ಯರ ಸಲಹೆ ನೀಡಿದ್ದರಂತೆ. ಈ ಹಿನ್ನೆಲೆ ಇಂದು ಮಲ್ಲಿಕಾರ್ಜುನ್ ಪುತ್ರ ಸಮರ್ಥ ಟಿಕೆಟ್ ಘೋಷಣೆಗೂ ಮುನ್ನ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.
