Trending

ಸಾಗರ : ಕೌಟುಂಬಿಕ ಕಲಹ – ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಯತ್ನ

Spread the love

ಸಾಗರ : ನಗರದ ಪ್ರತಿಷ್ಠಿತ ಡಯಾಗ್ನೋಸ್ಟಿಕ್ ಕೇಂದ್ರವೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ.

ಸೊರಬ ತಾಲೂಕು ಮೂಲದ ಶ್ವೇತಾ (30) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ಗುರುತಿಸಲಾಗಿದೆ. ಇವರು ಕಳೆದ ಕೆಲವು ಸಮಯದಿಂದ ಸಾಗರದ ಖಾಸಗಿ ಡಯಾಗ್ನೋಸ್ಟಿಕ್ ಕೇಂದ್ರದಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಪ್ರಾಥಮಿಕ ಮಾಹಿತಿ ಪ್ರಕಾರ, ಶ್ವೇತಾ ಅವರು ಕಳೆದ ಕೆಲವು ದಿನಗಳಿಂದ ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕ ಒತ್ತಡ ಅನುಭವಿಸುತ್ತಿದ್ದರು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ಭಾನುವಾರ ತಮ್ಮ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಕಿರುಚಾಟ ಕೇಳಿ ಸ್ಥಳಕ್ಕಾಗಮಿಸಿದ ಕುಟುಂಬಸ್ಥರು ಬೆಂಕಿ ನಂದಿಸಿ ರಕ್ಷಣೆಗೆ ಧಾವಿಸಿದ್ದಾರೆ.

ತೀವ್ರವಾಗಿ ಸುಟ್ಟು ಗಾಯಗೊಂಡಿದ್ದ ಶ್ವೇತಾ ಅವರನ್ನು ತಕ್ಷಣ ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಆದರೆ ಗಾಯದ ತೀವ್ರತೆ ಹೆಚ್ಚಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿನ ತಜ್ಞ ವೈದ್ಯರ ಸಲಹೆ ಮೇರೆಗೆ ಮುಂದಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸದ್ಯ ಶ್ವೇತಾ ಅವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಸಾಗರ ಪೇಟೆ ಠಾಣೆಯ ಪೊಲೀಸರು ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದು, ಕೌಟುಂಬಿಕ ಸಮಸ್ಯೆಗಳ ಹಿನ್ನೆಲೆ ಕುರಿತು ತನಿಖೆ ಕೈಗೊಂಡಿದ್ದಾರೆ.

[pj-news-ticker]