ಬೆಂಗಳೂರು : ಮೇ 15ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಚರ್ಚೆಗಳು ನಡೆಯುತ್ತಿವೆ. ಅವರ ಅಭಿಮಾನಿಗಳು ಮತ್ತು ಬೆಂಬಲಿಗ ಶಾಸಕರು, ಈ ದಿನದಂದು ಯಾವುದೇ ಶುಭ ಸುದ್ದಿ ನಿರೀಕ್ಷೆಯಲ್ಲಿ ಇದ್ದಾರೆ.
ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ಹೊರಬೀಳುವ ಸಾಧ್ಯತೆ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಆದರೆ, ಡಿಕೆ ಶಿವಕುಮಾರ್ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ತಾನು ಮುಖ್ಯಮಂತ್ರಿ ಹುದ್ದೆಯ ಚರ್ಚೆಯನ್ನು ಎಂದಿಗೂ ಮಾಡಿಲ್ಲ ಎಂದು ಹೇಳಿದ್ದಾರೆ.
ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದಕ್ಕೆ ತಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಬದ್ಧರಾಗಿರುವುದಾಗಿ ಅವರು ತಿಳಿಸಿದ್ದಾರೆ. ಪಕ್ಷದಲ್ಲಿ ಶೇಕಡಾ ನೂರರಷ್ಟು ಗೊಂದಲಗಳು ಇರುವುದು ನಿಜ ಎಂದು ಒಪ್ಪಿಕೊಂಡಿರುವ ಡಿಕೆ ಶಿವಕುಮಾರ್, ಅದನ್ನು ಬಗೆಹರಿಸುವುದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.
ಪಕ್ಷದ ಮೇಲೆ ಸಂಪೂರ್ಣ ವಿಶ್ವಾಸವಿದ್ದು, ಹೈಕಮಾಂಡ್ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ಈ ನಡುವೆ, ತಮ್ಮ ಹುಟ್ಟುಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಫ್ಲೆಕ್ಸ್ಗಳು ಮತ್ತು ಜಾಹೀರಾತುಗಳನ್ನು ಹಾಕದಂತೆ ಕಾರ್ಯಕರ್ತರಿಗೆ ಮತ್ತು ಅಭಿಮಾನಿಗಳಿಗೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಸ್ತೆಗಳಲ್ಲಿ ಫ್ಲೆಕ್ಸ್ಗಳನ್ನು ಅಳವಡಿಸಿದರೆ ಅಂತಹ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸುವುದಾಗಿ ಮತ್ತು ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಜಾಹೀರಾತು ನೀಡಲು ಇಚ್ಛಿಸುವವರು ಹಣ ಪಾವತಿಸಿ ಮಾಡಬಹುದು ಹೊರತು ರಸ್ತೆಗಳಲ್ಲಿ ಅನಧಿಕೃತವಾಗಿ ಪ್ರದರ್ಶಿಸಬಾರದು ಎಂದು ಮನವಿ ಮಾಡಿದ್ದಾರೆ. ಈ ಕುರಿತು ಕಾರ್ಪೊರೇಷನ್ ಕಮಿಷನರ್ಗಳಿಗೂ ಮೊದಲು ಕೇಸ್ ದಾಖಲಿಸಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.
