ಬೆಂಗಳೂರು : ಬಡ ಮಹಿಳೆಯರಿಗೆ, ಕುಟುಂಬಕ್ಕೆ ನೆರವಾಗಲು ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬರೋಬ್ಬರಿ 22 ಕೋಟಿ ರುಪಾಯಿ ವರ್ಗಾಯಿಸಿರುವ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಪ್ರಕರಣದ ಸಮಗ್ರ ತನಿಖೆಗೆ ಸರ್ಕಾರ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಖಾತರಿ ಯೋಜನೆಗಳ ಅನುಷ್ಠಾನ ಪರಿಶೀಲನಾ ಸಮಿತಿ ಸಭೆಯಲ್ಲಿ ಈ ವಿಷಯ ಬಹಿರಂಗಗೊಂಡಿದೆ. ಈ ಹಣವನ್ನು ಹಿಂಪಡೆಯಲು ತಕ್ಷಣ ಕ್ರಮಗಳನ್ನು ತೆಗೆದು ಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ನಿಷ್ಕ್ರಿಯ ಖಾತೆಗಳಿಗೆ ಹಣವನ್ನು ನಿರಂತರವಾಗಿ ವರ್ಗಾಯಿಸುವ ಬಗ್ಗೆ ರಾಜ್ಯ ಕಚೇರಿಯಿಂದ ಮಾಹಿತಿ ಬಂದಿದೆ. ದಾಖಲೆಗಳಲ್ಲಿ ಹಲವು ವ್ಯತ್ಯಾಸವಿರುವುದು ಪತ್ತೆಯಾಗಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ತಿಂಗಳು ತಿಂಗಳು ಸರಿಯಾಗಿ ಪಾವತಿಯಾಗುತ್ತಿಲ್ಲ ಎಂಬ ಜನರ ಆರೋಪದ ನಡುವೆ ಭಾರಿ ಪ್ರಮಾಣದ ಅಕ್ರಮ ಪತ್ತೆಯಾಗಿದೆ.
ಇದಲ್ಲದೆ ಕೆಲವು ಜೀವಂತ ಫಲಾನುಭವಿಗಳನ್ನು ಇಲಾಖೆಯ ದಾಖಲೆಗಳಲ್ಲಿ ಮೃತಪಟ್ಟವರು ಎಂದು ಗುರುತಿಸಿರುವ ಗಂಭೀರ ಎಡವಟ್ಟೂ ಕಂಡು ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಯಡಿ 4,25,759 ರೇಷನ್ ಕಾರ್ಡ್ ಹೊಂದಿದವರು ಇದ್ದು, ಇದುವರೆಗೆ 3,82,178 ಫಲಾನುಭವಿಗಳು ನೋಂದಾಯಿಸಿದ್ದಾರೆ.
