Trending

ಇರುವುಕ್ಕಿಯಲ್ಲಿ ಸಾಂಪ್ರದಾಯಿಕ ದಿನ ಹಾಗೂ ಜಾನಪದ ಕಲಾ ಉತ್ಸವ ಸಂಭ್ರಮ

Spread the love

ಶಿವಮೊಗ್ಗ: ಇರುವುಕ್ಕಿಯ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಆವರಣದಲ್ಲಿ “ನಿರಂತರ -2026” ಶೀರ್ಷಿಕೆಯಡಿ ಸಾಂಪ್ರದಾಯಿಕ ದಿನವನ್ನು  ವಿಜೃಂಭಣೆಯಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಕಣ್ಣೂರೇಶ್ವರ ಜಾನಪದ ಕಲಾಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಾನಪದ ಕಲಾ ಉತ್ಸವವೂ ನಡೆಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ವೇಷಭೂಷಣಗಳನ್ನು ಧರಿಸಿ ಸಂಭ್ರಮಿಸಿದರು. ಶಿಕ್ಷಣ ನಿರ್ದೇಶಕರಾದ ಡಾ. ಹೇಮ್ಲಾ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಶೇಷಾಧಿಕಾರಿಗಳಾದ ಡಾ. ಕೆ.ಸಿ. ಶಶಿಧರ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಿ. ಟಾಕಪ್ಪ ಕಣ್ಣೂರು ಜಾನಪದ ಕಲೆಗಳ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳಲ್ಲಿ ಜಾನಪದದ ಬಗ್ಗೆ ಆಸಕ್ತಿ ಹಾಗೂ ಅಭಿರುಚಿ ಬೆಳೆಸುವ ಅಗತ್ಯವಿದೆ ಎಂದು ತಿಳಿಸಿದರು. ತಮ್ಮ ಕಲಾ ಜೀವನದ ಅನುಭವಗಳನ್ನು ಹಂಚಿಕೊಂಡು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.

ನಂತರ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ. ಆರ್.ಸಿ. ಜಗದೀಶ್ ವಿವಿಧ ಕಲಾತಂಡಗಳನ್ನು ಅಭಿನಂದಿಸಿ, ಕಲಾವಿದರಿಗೆ ನೆನಪಿನ ಕಾಣಿಕೆಗಳನ್ನು ವಿತರಿಸಿದರು. ಜಾನಪದ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಉತ್ಸವಗಳಿಗೆ ವಿಶ್ವವಿದ್ಯಾಲಯದಿಂದ ಅಗತ್ಯ ಸಹಕಾರ ಮತ್ತು ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಡಾ. ಎಂ. ರವಿಕುಮಾರ್, ಡಾ. ಚಂದ್ರಶೇಖರ್ ಎಸ್. ವೈ., ಡಾ. ಜ್ಯೋತಿ ಎಂ. ರಾಥೋಡ್, ಡಾ. ಗಣಪತಿ, ಡಾ. ರವಿ ಸಿ. ಎಸ್. ಹಾಗೂ ಡಾ. ಸೋಮಶೇಖರಪ್ಪ ಪಿ. ಆರ್. ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

[pj-news-ticker]