Trending

ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ

Spread the love

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ 41 ವರ್ಷದ ಮಹಿಳೆಗೆ ನಿದ್ರಾಜನಕ ಬೆರೆಸಿದ ಪಾನೀಯ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜೂನ್ 3ರಂದು ಬಸವಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಘಟನೆ ನಡೆದಿದ್ದು, ಜೂನ್ 8ರಂದು ಮಹಿಳೆಯ ವಿಡಿಯೋವನ್ನು ಆರೋಪಿಗಳು ವಿವಿಧ ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಮಹಿಳೆ ನೀಡಿದ ದೂರಿನ ಪ್ರಕಾರ, ಪತಿಯೊಂದಿಗೆ ಜಗಳವಾದ ಬಳಿಕ ತವರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಸಹಾಯ ಮಾಡುವ ನೆಪದಲ್ಲಿ ಆಕೆಯ ಬಳಿ ಬಂದಿದ್ದಾರೆ. ಬಳಿಕ ತಂಪು ಪಾನೀಯ ನೀಡಿದ್ದು, ಅದರಲ್ಲಿ ನಿದ್ರಾಜನಕ ಬೆರೆಸಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಪಾನೀಯ ಸೇವಿಸಿದ ಬಳಿಕ ಮಹಿಳೆ ಪ್ರಜ್ಞಾಹೀನಳಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಮಹಿಳೆಯನ್ನು ಗ್ರಾಮದ ಹೊರವಲಯದ ಕೃಷಿ ಜಮೀನಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ಆರೋಪಿಗಳು ಮಹಿಳೆಯ ಅರೆಪ್ರಜ್ಞಾವಸ್ಥೆಯಲ್ಲಿದ್ದಾಗಲೇ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ.

ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಷಯವನ್ನು ಗ್ರಾಮಸ್ಥರಿಂದ ತಿಳಿದುಕೊಂಡ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ಸೆಕ್ಷನ್ 70 ಸೇರಿದಂತೆ ವಿವಿಧ ವಿಧಿಗಳು ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್.ಟಿ., “ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 10 ಆರೋಪಿಗಳನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

[pj-news-ticker]