ಚಿಕ್ಕಮಗಳೂರು : ಕಡೂರು ತಾಲೂಕಿನ ಹಳ್ಳಿಯೊಂದರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂವರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕ ನಾಗರಾಜಪ್ಪ ಹಾಗೂ ಮುಖ್ಯೋಪಾಧ್ಯಾಯ ಲೋಕೇಶಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
ದೂರಿನ ಪ್ರಕಾರ, ಶಿಕ್ಷಕ ನಾಗರಾಜಪ್ಪ ವಿದ್ಯಾರ್ಥಿನಿಯರಿಂದ ಮೊಬೈಲ್ ಫೋನ್ ತರಿಸಿಕೊಂಡು ಅಶ್ಲೀಲ ವಿಡಿಯೋಗಳು ಮತ್ತು ಸಂದೇಶಗಳನ್ನು ಕಳುಹಿಸಿದ್ದಾನೆ ಎನ್ನಲಾಗಿದೆ. ಅಲ್ಲದೆ, ವಿದ್ಯಾರ್ಥಿನಿಯರ ಉಡುಪುಗಳ ಕುರಿತು ಅನುಚಿತವಾಗಿ ಪ್ರಶ್ನಿಸಿ ಪರಿಶೀಲನೆ ನಡೆಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.
ವಿಷಯವನ್ನು ಯಾರಿಗೂ ತಿಳಿಸದಂತೆ ಮಕ್ಕಳಿಗೆ ಬೆದರಿಕೆ ಹಾಕಿ ದೇವರ ಮೇಲೆ ಆಣೆ ಮಾಡಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಕುರಿತು ಪೋಷಕರು ಮುಖ್ಯೋಪಾಧ್ಯಾಯರ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪವೂ ಇದೆ.
ಈ ಹಿನ್ನೆಲೆಯಲ್ಲಿ ಯಗಟಿ ಪೊಲೀಸ್ ಠಾಣೆಯಲ್ಲಿ ಮೂವರು ಬಾಲಕಿಯರಿಂದ ಪ್ರತ್ಯೇಕ ದೂರುಗಳು ದಾಖಲಾಗಿದ್ದು, ಶಿಕ್ಷಕ ನಾಗರಾಜಪ್ಪ ಹಾಗೂ ಮುಖ್ಯೋಪಾಧ್ಯಾಯ ಲೋಕೇಶಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.
