ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ಹಣಜಿ ಗ್ರಾಮದಲ್ಲಿ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ನಡೆದಿದೆ.
ಮೃತರನ್ನು ಶಿಕಾರಿಪುರ ಮೂಲದ ಸ್ವಾತಿ (26) ಎಂದು ಗುರುತಿಸಲಾಗಿದೆ. ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಅವರು ಇತ್ತೀಚೆಗೆ ತವರು ಮನೆಗೆ ಬಂದಿದ್ದರು. ಘಟನೆ ನಡೆದ ವೇಳೆ ಸ್ವಾತಿಯವರ ತಂದೆ-ತಾಯಿ ಕೆಲಸ ನಿಮಿತ್ತ ಹೊಲಕ್ಕೆ ತೆರಳಿದ್ದರೆಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಮನೆಯೊಳಗಿದ್ದ ಸ್ವಾತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ಹೊತ್ತಾದರೂ ಯಾವುದೇ ಪ್ರತಿಕ್ರಿಯೆ ಇಲ್ಲದಿದ್ದಾಗ ಅನುಮಾನಗೊಂಡ ಅಕ್ಕಪಕ್ಕದವರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಧಾವಿಸಿದ ಕುಟುಂಬದವರು ಹಾಗೂ ನೆರೆಹೊರೆಯವರು ಮನೆಯೊಳಗೆ ಪ್ರವೇಶಿಸಿದಾಗ, ಅವರು ಮೃತಪಟ್ಟಿರುವುದು ಕಂಡುಬಂದಿದೆ.
ಪ್ರಾಥಮಿಕ ಮಾಹಿತಿಯಂತೆ, ಸ್ವಾತಿ ಅವರು ಕಳೆದ ಕೆಲವು ದಿನಗಳಿಂದ ಗರ್ಭಾವಸ್ಥೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರಿಗೆ ನಿರಂತರ ವಾಂತಿ ಹಾಗೂ ತೀವ್ರ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಪಡೆದಿದ್ದರೂ ಸಮಸ್ಯೆ ಮುಂದುವರಿದಿತ್ತು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಸಮಸ್ಯೆಯಿಂದ ಮನನೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದರೂ, ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆನವಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ಮುಂದುವರಿಸಿದ್ದಾರೆ.
