Trending

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ವೃದ್ಧೆ ಕೊಲೆ ಆರೋಪಿ ಪೊಲೀಸರ ಮೇಲೆಯೇ ಮಚ್ಚು ದಾಳಿ – ಕಾಲಿಗೆ ಗುಂಡು ಹಾರಿಸಿ ಬಂಧನ

Spread the love

ಶಿವಮೊಗ್ಗ: ನಗರದಲ್ಲಿ ವೃದ್ಧೆಯೊಬ್ಬರನ್ನು ಬರ್ಬರವಾಗಿ ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸರು ಹಾಗೂ ಆರೋಪಿಯ ನಡುವೆ ಹೈಡ್ರಾಮಾ ನಡೆದಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಗುಂಡೇಟಿಗೆ ಒಳಗಾದ ಆರೋಪಿ ಕಿಶೋರ್ (28) ಎಂದು ಗುರುತಿಸಲಾಗಿದೆ. ಈತ ಬುಧವಾರ ಮಿಳಘಟ್ಟದ ನಿವಾಸಿ 65 ವರ್ಷದ ಸುಶೀಲಮ್ಮ ಅವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದ.

ಆರೋಪಿ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜಪೇಯಿ ಲೇಔಟ್‌ನಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಗುರುವಾರ ಮುಂಜಾನೆ ದೊಡ್ಡಪೇಟೆ ಸಿಪಿಐ ಸತ್ಯನಾರಾಯಣ್ ವೈ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದರು.

ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕಿಶೋರ್, ಪೊಲೀಸ್ ಸಿಬ್ಬಂದಿ ಗಣೇಶ್ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಇನ್ಸ್‌ಪೆಕ್ಟರ್ ಸತ್ಯನಾರಾಯಣ್ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದರು. ಆದರೂ ಆರೋಪಿ ಮಣಿಯದ ಕಾರಣ ಸಿಬ್ಬಂದಿಯ ಪ್ರಾಣರಕ್ಷಣೆ ಹಾಗೂ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದರು.

ಗಾಯಗೊಂಡ ಆರೋಪಿ ಕಿಶೋರ್‌ನನ್ನು ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕರ್ತವ್ಯದ ವೇಳೆ ಗಾಯಗೊಂಡ ಪೊಲೀಸ್ ಸಿಬ್ಬಂದಿ ಗಣೇಶ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ, ಪ್ರಕರಣದ ಕುರಿತು ಮಾಹಿತಿ ಪಡೆದರು. ವೃದ್ಧೆಯ ಕೊಲೆ ಪ್ರಕರಣದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಿದ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ

[pj-news-ticker]