ಮುಂಬೈ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್ವಾಡ ಪ್ರದೇಶದಲ್ಲಿ ಬುಧವಾರ ಬೃಹತ್ ಕಟ್ಟಡವೊಂದು ಕುಸಿದಿದ್ದು, ಕನಿಷ್ಠ 15 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಪುಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ನಡುವೆಯೇ ಈ ದುರಂತ ಸಂಭವಿಸಿದೆ.
ಅಗ್ನಿಶಾಮಕ ಸಿಬ್ಬಂದಿ, ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಸೇರಿದಂತೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿರುವವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಭಾರಿ ಯಂತ್ರೋಪಕರಣಗಳನ್ನು ಬಳಸಿ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಾವು-ನೋವು ಅಥವಾ ಗಾಯಗೊಂಡವರ ಸಂಖ್ಯೆಯನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಿಂದಾಗಿ ಪ್ರವಾಹ ಸೇರಿದಂತೆ ಕಟ್ಟಡಗಳಿಗೆ ಹಾನಿಯುಂಟಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಪುಣೆ ಮತ್ತು ಪಿಂಪ್ರಿ-ಚಿಂಚ್ವಾಡದಲ್ಲಿ ಕಳೆದ ಒಂದು ವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, 6,000ಕ್ಕೂ ಹೆಚ್ಚು ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಈ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ‘ಆರೆಂಜ್ ಅಲರ್ಟ್’ ಘೋಷಿಸಿದೆ. ಜತೆಗೆ, ಪುಣೆಯ ಕೆಲವು ಭಾಗಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
