Trending

ಭದ್ರಾವತಿ : ವಸ್ತುನಿಷ್ಠ, ನಿಷ್ಪಕ್ಷಪಾತ ವರದಿಗಾರಿಕೆ ಪ್ರಜಾಪ್ರಭುತ್ವದ ಬಲ : ಸಂಸದ ಬಿ.ವೈ. ರಾಘವೇಂದ್ರ

Spread the love

ಭದ್ರಾವತಿ : ವೇಗವಾಗಿ ಸುದ್ದಿ ನೀಡುವುದಕ್ಕಿಂತ ಅದರ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿಯಾಗಿದೆ. ವಸ್ತುನಿಷ್ಠ ಹಾಗೂ ನಿಷ್ಪಕ್ಷಪಾತ ವರದಿಗಾರಿಕೆ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕವು ಸರ್ಕಾರಿ ಇಲಾಖೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಂತ್ರಜ್ಞಾನ ಕ್ರಾಂತಿಯಿಂದ ವಿಶ್ವದ ಯಾವುದೇ ಮೂಲೆಯ ಮಾಹಿತಿ ಕ್ಷಣಾರ್ಧದಲ್ಲಿ ಮೊಬೈಲ್ ಮೂಲಕ ದೊರೆಯುತ್ತಿರುವ ಈ ಕಾಲದಲ್ಲಿ, ಮಾಹಿತಿಯ ನೈಜತೆ ಪ್ರಶ್ನಾರ್ಹವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಸಂದರ್ಭದಲ್ಲಿ ವಿಶ್ವಾಸಾರ್ಹ ಸುದ್ದಿಯನ್ನು ಜನರಿಗೆ ತಲುಪಿಸುವ ಹೊಣೆಗಾರಿಕೆ ಪತ್ರಕರ್ತರ ಮೇಲಿದೆ ಎಂದು ಹೇಳಿದರು.

ನಗರಸಭೆಯ ಹಿರಿಯ ಸದಸ್ಯ ಬಿ.ಕೆ. ಮೋಹನ್ ಮಾತನಾಡಿ, ರಸ್ತೆ ಅಪಘಾತಗಳು ಹಾಗೂ ಗಂಭೀರ ಆರೋಗ್ಯ ಸಮಸ್ಯೆಗಳ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಕ್ತದ ಅಗತ್ಯವೂ ಹೆಚ್ಚಾಗಿದೆ. ರಕ್ತದಾನದ ಮಹತ್ವದ ಕುರಿತು ಸಮಾಜದಲ್ಲಿ ಇನ್ನಷ್ಟು ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಪತ್ರಿಕಾ ದಿನಾಚರಣೆ ಅಂಗವಾಗಿ ಸಂಘದ ಹಿರಿಯ ಸದಸ್ಯ ಅನಂತಕುಮಾರ್ ಅವರನ್ನು ದಂಪತಿ ಸಮೇತ ಸನ್ಮಾನಿಸಲಾಯಿತು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ರಾಜು ನರಸಯ್ಯ, ಹಾಲೇಶಪ್ಪ ಹಾಗೂ ವಿಲ್ಸನ್ ಅವರಿಗೂ ಗೌರವ ಸಲ್ಲಿಸಲಾಯಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಆಶಾಕಿರಣ ಮಾದಕ ಮತ್ತು ಮದ್ಯ ವ್ಯಸನಗಳ ಸಮಗ್ರ ಪುನರ್ವಸತಿ ಕೇಂದ್ರದ ಫಾ. ಪ್ರಕಾಶ್ ಕೊಲಾಕೊ, ಜೇಡಿಕಟ್ಟೆ ಶ್ರೀ ಮರುಳ ಸಿದ್ದೇಶ್ವರ ಗದ್ದುಗೆ ಮಠದ ತಿಪ್ಪೇಸ್ವಾಮಿ (ರುದ್ರೇಶ ಶಾಸ್ತ್ರಿ) ಹಾಗೂ ಜಮಾಅತೆ ಇಸ್ಲಾಮಿ-ಇ-ಹಿಂದ್ ಅಧ್ಯಕ್ಷ ಸುಲ್ತಾನ್ ಬೇಗ್ ಸರ್ವಧರ್ಮೀಯರ ಸಮ್ಮುಖದಲ್ಲಿ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

ಬೆಳಿಗ್ಗೆ 8.30ರಿಂದ ಸಂಜೆ 4 ಗಂಟೆಯವರೆಗೆ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ದಾಖಲೆಯ ಸುಮಾರು 250 ಯೂನಿಟ್ ರಕ್ತ ಸಂಗ್ರಹವಾಗಿದ್ದು, ಆಶಾಜ್ಯೋತಿ, ಜೀವ ಸಂಜೀವಿನಿ, ಡಾ. ಬಿ.ಆರ್. ಅಂಬೇಡ್ಕರ್, ರೆಡ್ ಕ್ರಾಸ್, ಸುಬ್ಬಯ್ಯ ಆಸ್ಪತ್ರೆ ಹಾಗೂ ರೋಟರಿ ರಕ್ತನಿಧಿ ಕೇಂದ್ರಗಳು ರಕ್ತ ಸಂಗ್ರಹ ಕಾರ್ಯದಲ್ಲಿ ಭಾಗವಹಿಸಿದ್ದವು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಜೆ.ಸಿ. ಗೀತಾ ರಾಜಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಯು. ವೈದ್ಯನಾಥ, ಲಯನ್ಸ್ ಕ್ಲಬ್ ಅಧ್ಯಕ್ಷ ಡಿ. ಶಂಕರಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಬಸವರಾಜ್ ಸ್ವಾಗತಿಸಿ, ಖಜಾಂಚಿ ಫಿಲೋಮಿನಾ ಆರ್. ಅಂತೋಣಿ ವಂದಿಸಿದರು.

ವಿವಿಧ ಸರ್ಕಾರಿ ಇಲಾಖೆಗಳು ಹಾಗೂ 60ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಶಿಬಿರದ ಯಶಸ್ಸಿಗೆ ಸಹಕಾರ ನೀಡಿದವು.

[pj-news-ticker]