Trending

ರಾಜ್ಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ನಕಲಿ ಪಿಎಚ್‌ಡಿ ಪ್ರಮಾಣಪತ್ರ ನೀಡಿ 249 ಮಂದಿ ಆಯ್ಕೆ : ಕೇಸ್‌ ದಾಖಲಿಸಲು ಸೂಚನೆ

Spread the love

ಕಲಬುರಗಿ : ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 249 ಅತಿಥಿ ಉಪನ್ಯಾಸಕರು ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿ ನೇಮಕಾತಿ ಪಡೆದಿರುವ ಬೃಹತ್‌ ನೇಮಕಾತಿ ಅಕ್ರಮ ರಾಜ್ಯದಲ್ಲಿ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರಿಗೆ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸಿ, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

ಆಯುಕ್ತರು ಜುಲೈ 21ರಂದು ಈ ಕುರಿತು ಆದೇಶ ಹೊರಡಿಸಿದ್ದು, ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ತಕ್ಷಣ ಸೇವೆಯಿಂದ ಬಿಡುಗಡೆಗೊಳಿಸಿ, ಮುಂದಿನ ಯಾವುದೇ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಬ್ಲ್ಯಾಕ್ ಲಿಸ್ಟ್ಗೆ ಸೇರಿಸಲು ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅತಿಥಿ ಉಪನ್ಯಾಸಕರ ನೇಮಕಾತಿ ವೇಳೆ ದಾಖಲೆಗಳನ್ನು ಪರಿಶೀಲಿಸಿ ನೇಮಕಾತಿ ಆದೇಶ ನೀಡಲಾಗುತ್ತದೆ. ಬಳಿಕ ಪ್ರಮಾಣಪತ್ರಗಳನ್ನು ದೃಢೀಕರಣಕ್ಕಾಗಿ ಸಂಬಂಧಿತ ವಿಶ್ವವಿದ್ಯಾಲಯಗಳಿಗೆ ಕಳುಹಿಸಲಾಗುತ್ತದೆ. ಈ ವೇಳೆ 249 ಅಭ್ಯರ್ಥಿಗಳ ಪಿಎಚ್‌ಡಿ ಪ್ರಮಾಣಪತ್ರಗಳು ಅಸಲಿಯಲ್ಲ ಎಂಬುದನ್ನು ವಿಶ್ವವಿದ್ಯಾಲಯಗಳು ದೃಢಪಡಿಸಿವೆ.

ಜಿಲ್ಲಾವಾರು ವಿವರ ನೋಡುವುದಾದರೆ ಕಲಬುರಗಿ – 33, ಯಾದಗಿರಿ – 31, ಬೀದರ್ – 28, ರಾಯಚೂರು – 24, ಕೊಪ್ಪಳ – 13, ವಿಜಯನಗರ – 9, ಬಳ್ಳಾರಿ – 2 ಅತಿಥಿ ಉಪನ್ಯಾಸಕರು ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿ ನೇಮಕಾತಿ ಪಡೆದಿರುವ ಆರೋಪ ಕೇಳಿಬಂದಿದೆ.

ಇನ್ನು ಬೀದರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 19, ಕಲಬುರಗಿಯ ಸೇಡಂ ರಸ್ತೆಯ ಸ್ವಾಯತ್ತ ಸರ್ಕಾರಿ ಕಾಲೇಜಿನಲ್ಲಿ 17 ಹಾಗೂ ಕಲಬುರಗಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 15 ಮಂದಿ ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿರುವುದು ಪತ್ತೆಯಾಗಿದೆ.

ಇದೇ ವೇಳೆ, ಕಲಬುರಗಿ, ಕೊಪ್ಪಳ, ವಿಜಯನಗರ ಹಾಗೂ ಬೀದರ್ ಜಿಲ್ಲೆಯ ಕೆಲವು ಕಾಲೇಜುಗಳ ಪ್ರಾಂಶುಪಾಲರು 8 ಅಭ್ಯರ್ಥಿಗಳ ಪ್ರಮಾಣಪತ್ರಗಳು ಅಸಲಿಯಾಗಿವೆ ಎಂದು ಟಿಪ್ಪಣಿ ಸೇರಿಸಿರುವ ಹಿನ್ನೆಲೆಯಲ್ಲಿ, ಆ ದಾಖಲೆಗಳನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಇಲಾಖೆ ಸೂಚಿಸಿದೆ.

[pj-news-ticker]