ಬೆಂಗಳೂರು : ಪ್ರಹ್ಲಾದ್ ಜೋಶಿಗೆ ಶಿಕ್ಷಣ ಖಾತೆ ನೀಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಸಂಸದರೊಬ್ಬರು ಶಿಕ್ಷಣ ಸಚಿವರಾದರೆಂದು ಹೆಮ್ಮೆ ಪಡಬೇಕಿತ್ತು ಆದರೆ ಅತ್ಯಾಚಾರಿಗಳನ್ನು ಸಮರ್ಥಿಸಿಕೊಂಡಿದ್ದ ಜೋಶಿಗೆ ಶಿಕ್ಷಣ ಖಾತೆ ನೀಡಿದ್ದಾರೆ ಶಿಕ್ಷಣ ಸಚಿವರನ್ನಾಗಿ ಮಾಡಿ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್ ನಲ್ಲಿ ಕರ್ನಾಟಕದ ಸಂಸದರೊಬ್ಬರು ದೇಶದ ಶಿಕ್ಷಣ ಸಚಿವರಾದರೆಂದು ನಾವೆಲ್ಲರೂ ಹೆಮ್ಮೆ ಪಡಬೇಕಾಗಿತ್ತು, ಆದರೆ ಸನ್ಮಾನ್ಯ @narendramodi ಅವರು ಮಹಿಳೆಯ ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಸಂಸದ @JoshiPralhad ಅವರನ್ನು ಶಿಕ್ಷಣ ಸಚಿವನನ್ನಾಗಿ ಮಾಡಿ ಕನ್ನಡಿಗರೆಲ್ಲರೂ ತಲೆತಗ್ಗಿಸುವ ಹಾಗೆ ಮಾಡಿದ್ದಾರೆ.
ನಿರ್ಗಮಿತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗಿಂತ ಪ್ರಹ್ಲಾದ್ ಜೋಷಿ ಅವರು ಯಾವುದೇ ರೀತಿ ಭಿನ್ನರಲ್ಲ, ಇವರಿಬ್ಬರೂ ಸೈದ್ಧಾಂತಿಕವಾಗಿ ಅವಳಿ-ಜವಳಿಗಳು. ಇಬ್ಬರೂ ಸಂಘ ಪರಿವಾರದ ಎಬಿವಿಪಿಯಿಂದ ಪಕ್ಷಕ್ಕೆ ಬಂದವರು. ಮಹಿಳೆಯರು, ದಲಿತರು, ಬಡವರು, ಹಿಂದುಳಿದ ಜಾತಿಗಳು ಮತ್ತು
ಮುಸ್ಲಿಂ – ಕ್ರಿಶ್ಚಿಯನರ ಬಗ್ಗೆ ಆರ್.ಎಸ್.ಎಸ್ ಹೊಂದಿರುವ ಅಭಿಪ್ರಾಯವನ್ನೇ ಹೊಂದಿದವರು. ಇದಕ್ಕಾಗಿಯೇ ಪ್ರಧಾನ್ ಅವರ ಸ್ಥಾನಕ್ಕೆ ಜೋಷಿ ಅವರನ್ನು ತಂದು ಕೂರಿಸಲಾಗಿದೆ. ಇದೊಂದು ರೀತಿ ಊದುವುದನ್ನು ಕೊಟ್ಟು ಬಾರಿಸುವುದನ್ನು ಕೊಂಡು ಬಂದಂತೆ. ಬದಲಾಗಿದ್ದು ಪಾತ್ರಧಾರಿ ಅಷ್ಟೆ, ಸೂತ್ರಧಾರಿಗಳಾದ ಆರ್.ಎಸ್.ಎಸ್ ನ ನಿರ್ದೇಶನದಂತೆ ಇವರೂ ನಡೆದುಕೊಳ್ಳಬೇಕಾಗುತ್ತದೆ.
ಗುಜರಾತ್ ಗಲಭೆಯ ಕಾಲದಲ್ಲಿ ಬಿಲ್ಕಿಸ್ ಭಾನು ಎಂಬ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರಿಗಳನ್ನು 2022ರಲ್ಲಿ ಗುಜರಾತ್ ಸರ್ಕಾರ ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿದ್ದನ್ನು ಪ್ರಹ್ಲಾದ ಜೋಷಿ ಅವರು ಸಮರ್ಥಿಸಿ ಅತ್ಯಾಚಾರಿಗಳ ಪರವಾಗಿ ಮಾತನಾಡಿದ್ದರು. ಇಂತಹವರು ಶಿಕ್ಷಣ ಸಚಿವರಾದರೆ ದೇಶದ ಶಿಕ್ಷಣ ವ್ಯವಸ್ಥೆಯ ಗತಿ ಏನಾಗಬಹುದು ಎನ್ನುವುದು ನಮ್ಮೆಲ್ಲರ ಈಗಿನ ಆತಂಕ.
ಧರ್ಮೇಂದ್ರ ಪ್ರಧಾನ್ ಹಾದಿಯಲ್ಲಿಯೇ ಜೋಷಿ ಅವರು ಹೊರಡುವುದಕ್ಕೆ ಬಹಳ ದಿನಗಳು ಬೇಕಾಗಿಲ್ಲ. ಪ್ರಧಾನಿ ನರೇಂದ್ರ ಮೋದಿಯವರಿಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಬಗ್ಗೆ ಒಂದಿಷ್ಟು ಕಾಳಜಿ ಹೊಂದಿದ್ದರೆ ತಕ್ಷಣ ಶಿಕ್ಷಣ ಖಾತೆಯನ್ನು ಜೋಷಿ ಅವರಿಂದ ಕಿತ್ತುಕೊಂಡು, ಯಾರಾದರೂ ಅರ್ಹರಿದ್ದರೆ ಅಂತವರಿಗೆ ಈ ಮಹತ್ವದ ಖಾತೆಯ ಹೊಣೆ ವಹಿಸಿ ಕೊಡಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
