ಭದ್ರಾವತಿ : ನಗರದಲ್ಲಿ ಹೆಚ್ಚುತ್ತಿರುವ ಕೊಲೆ, ಸುಲಿಗೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳು ಹಾಗೂ ಗಾಂಜಾ, ಓಸಿ, ಮಟ್ಕಾ, ಇಸ್ಪೀಟ್ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಭದ್ರಾವತಿ ನಗರ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಗುರುವಾರ ಡಿ.ವೈ.ಎಸ್.ಪಿ. ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್. ತೀರ್ಥಯ್ಯ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಪೊಲೀಸ್ ಇಲಾಖೆ ಅಪರಾಧ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ, ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದ್ದು, ಅಪರಾಧಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು.
ನಗರದಲ್ಲಿ ಓಸಿ, ಮಟ್ಕಾ, ಇಸ್ಪೀಟ್ ಹಾಗೂ ಗಾಂಜಾ ಮಾರಾಟ ಮತ್ತು ಸೇವನೆ ಸೇರಿದಂತೆ ಎಲ್ಲ ರೀತಿಯ ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಮಹಿಳೆಯರು, ಮಕ್ಕಳು, ರೈತರು ಸೇರಿದಂತೆ ಸಾರ್ವಜನಿಕರು ನಿರ್ಭಯವಾಗಿ ಬದುಕುವ ವಾತಾವರಣ ನಿರ್ಮಿಸಬೇಕು. ಶಾಲೆ-ಕಾಲೇಜುಗಳು ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಗಳ ಸುತ್ತಮುತ್ತ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸುವಂತೆ ಒತ್ತಾಯಿಸಿದರು.
ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್. ತೀರ್ಥಯ್ಯ, ಮುಖಂಡರಾದ ಮಂಗೋಟೆ ರುದ್ರೇಶ್ ಹಾಗೂ ಆನಂದ್ ಕುಮಾರ್ ಮಾತನಾಡಿ, ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಮತ್ತು ಮಾದಕ ವಸ್ತುಗಳ ಜಾಲವನ್ನು ಮಟ್ಟಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಹಾಗೂ ನಿರಂತರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಸರಸ್ವತಿ ವಿಜಯ್ ಕುಮಾರ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚೆನ್ನೇಶ್, ರಘುರಾವ್, ಮೊಸರಹಳ್ಳಿ ಅಣ್ಣಪ್ಪ, ಹನುಮಂತ ನಾಯಕ್, ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ಸಿಮೆಂಟ್ ಮಂಜಣ್ಣ, ರಾಮಲಿಂಗಯ್ಯ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಹಿಳಾ ಕಾರ್ಯಕರ್ತರು ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
ಬಳಿಕ ಭದ್ರಾವತಿಯಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಿ, ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಿ ಸಾರ್ವಜನಿಕರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವಂತೆ ಆಗ್ರಹಿಸಿ ಡಿ.ವೈ.ಎಸ್.ಪಿ. ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
