ಬೆಂಗಳೂರು : ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆರೆಗಳಿಗೆ ಕೊಳವೆ ಮಾರ್ಗದ ಮೂಲಕ ನೀರು ತುಂಬಿಸುವ ಮಹತ್ವದ ₹22.42 ಕೋಟಿ ವೆಚ್ಚದ ಯೋಜನೆಗೆ ತುರ್ತು ಅನುಮೋದನೆ ನೀಡಿ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ನಿಯೋಗ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದೆ.
ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗ, ಶಿವಮೊಗ್ಗ ಗ್ರಾಮಾಂತರ ಭಾಗದ ರೈತರು ಹಲವು ವರ್ಷಗಳಿಂದ ಎದುರಿಸುತ್ತಿರುವ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಯೋಜನೆಯನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿತು.
ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ, ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯಕ್, ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಸಿಂಗನಹಳ್ಳಿ ಸುರೇಶ್ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
ಎರಡು ಹಂತದಲ್ಲಿ ಕಾಮಗಾರಿ
ಕೆರೆಗಳಿಗೆ ಕೊಳವೆ ಮಾರ್ಗದ ಮೂಲಕ ನೀರು ತುಂಬಿಸುವ ಕಾಮಗಾರಿಯನ್ನು ಎರಡು ಹಂತಗಳಲ್ಲಿ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ₹22.42 ಕೋಟಿ ಅಂದಾಜು ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮೊದಲ ಹಂತದ ಕಾಮಗಾರಿಗೆ ₹9.76 ಕೋಟಿ, ಎರಡನೇ ಹಂತಕ್ಕೆ ₹9.96 ಕೋಟಿ ಹಾಗೂ ಹೆಚ್ಚುವರಿ ಕಾಮಗಾರಿಗಳಿಗೆ ₹2.70 ಕೋಟಿ ವೆಚ್ಚವಾಗಲಿದೆ.
ಯೋಜನೆ ಜಾರಿಯಾದರೆ ಕೊನೆಯ ಭಾಗದ ರೈತರಿಗೂ ಸಮರ್ಪಕ ನೀರಾವರಿ ಸೌಲಭ್ಯ ದೊರೆಯಲಿದ್ದು, ಕೆರೆಗಳ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚುವುದರ ಜೊತೆಗೆ ಅಂತರ್ಜಲ ಮರುಪೂರಣಕ್ಕೂ ಸಹಕಾರಿಯಾಗಲಿದೆ. ಕೃಷಿ ಚಟುವಟಿಕೆಗಳಿಗೆ ಅಗತ್ಯ ನೀರಿನ ಲಭ್ಯತೆ ಹೆಚ್ಚುವ ನಿರೀಕ್ಷೆಯಿದೆ.
