ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮುಸ್ಕಾನ್ ಅವರನ್ನು ಮನೆಯೊಳಗೆ ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ತಿಲಕ್ ನಗರದ ನ್ಯೂ ಮಹಾವೀರ್ ನಗರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮುಸ್ಕಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಮ್ ಟ್ರೇನರ್ ಇಮ್ರಾನ್ನನ್ನು ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿಯಾಗಿದ್ದ ಮುಸ್ಕಾನ್ ಮಾಡೆಲಿಂಗ್ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ. ಕೆಲ ದಿನಗಳ ಹಿಂದಷ್ಟೇ ಜಿಮ್ನಲ್ಲಿ ಇಮ್ರಾನ್ಗೆ ಮುಸ್ಕಾನ್ ಪರಿಚಯವಾಗಿದ್ದು, ಬಳಿಕ ಆಕೆಯೊಂದಿಗೆ ಸ್ನೇಹ ಬೆಳೆಸಲು ಆತ ನಿರಂತರವಾಗಿ ಪ್ರಯತ್ನಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿದ್ದ ಪರಿಸ್ಥಿತಿಯನ್ನು ಅರಿತುಕೊಂಡ ಆರೋಪಿ ಮನೆಗೆ ನುಗ್ಗಿ ಮುಸ್ಕಾನ್ಗೆ ಚೂರಿಯಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.
ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಸಂಪೂರ್ಣ ವಿವರಕ್ಕಾಗಿ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
