ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಆಕೆಯ ಬಳಿಯಿದ್ದ ಬಂಗಾರದ ಸರವನ್ನು ಮೋಸದಿಂದ ಪಡೆದುಕೊಂಡ ಪ್ರಕರಣದಲ್ಲಿ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಜೊತೆಗೆ ₹1.62 ಲಕ್ಷ ದಂಡ ಹಾಗೂ ಸಂತ್ರಸ್ತ ಬಾಲಕಿಗೆ ₹62 ಸಾವಿರ ಪರಿಹಾರ ನೀಡುವಂತೆ ಆದೇಶಿಸಿದೆ.
2022ರಲ್ಲಿ ಶಿವಮೊಗ್ಗ ಟೌನ್‌ನ 20 ವರ್ಷದ ವ್ಯಕ್ತಿಯ ವಿರುದ್ಧ 17 ವರ್ಷದ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ IPC ಕಲಂ 363, 366, 420 ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಕುಂಸಿ ಠಾಣೆಯ ಪಿಎಸ್ಐ ಕೃಷ್ಣಾ ನಾಯ್ಕ್ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಶಿವಮೊಗ್ಗದ FTSC-1 ನ್ಯಾಯಾಲಯದಲ್ಲಿ ನಡೆದಿದ್ದು, ಸರ್ಕಾರದ ಪರ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.
ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಅವರು ಆಗಸ್ಟ್ 28ರಂದು ತೀರ್ಪು ಪ್ರಕಟಿಸಿದರು. ಆರೋಪಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1,62,000 ದಂಡ ವಿಧಿಸಿದ ನ್ಯಾಯಾಲಯ, ನೊಂದ ಬಾಲಕಿಗೆ ₹62,000 ಪರಿಹಾರ ನೀಡುವಂತೆ ಆದೇಶಿಸಿದೆ.
