ಭದ್ರಾವತಿ: ಹೆಣ್ಣು ಭ್ರೂಣ ಹತ್ಯೆ ಮಾನವೀಯತೆಯ ವಿರುದ್ಧದ ಮಹಾಪರಾಧವಾಗಿದ್ದು, ಯಾವುದೇ ಕಾರಣಕ್ಕೂ ಹೆಣ್ಣು ಮಕ್ಕಳ ಹತ್ಯೆ ನಡೆಯಬಾರದು ಎಂದು ಅಕ್ಬರ್ ಅಲಿ ಉಡುಪಿ ಹೇಳಿದರು.
ಹೆಣ್ಣು ಮಗು ಪ್ರಪಂಚದ ಅತ್ಯಂತ ಸುಂದರವಾದ ಜೀವಿಗಳಲ್ಲಿ ಒಂದಾಗಿದ್ದು, ಅದನ್ನು ದ್ವೇಷಿಸುವ ಮನೋಭಾವ ಮಾನವೀಯತೆಗೆ ವಿರುದ್ಧವಾಗಿದೆ. ಹೆಣ್ಣು ಮಕ್ಕಳನ್ನು ಪ್ರೀತಿ, ವಾತ್ಸಲ್ಯ ಮತ್ತು ಗೌರವದಿಂದ ಬೆಳೆಸಬೇಕು ಎಂದು ಅವರು ತಿಳಿಸಿದರು.
ಪ್ರವಾದಿ ಮೊಹಮ್ಮದ್ ಅವರು ತಮ್ಮ ಕುಟುಂಬದ ಮಹಿಳೆಯರನ್ನು ಅತ್ಯಂತ ಗೌರವದಿಂದ ಕಾಣುತ್ತಿದ್ದರು. ಪ್ರತಿಯೊಬ್ಬರೂ ಮಹಿಳೆಯರನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭದ್ರಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾ ನಾಯ್ಕ್ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಮೂಲಭೂತವಾದದ ಬೆಳವಣಿಗೆಯಿಂದ ಧರ್ಮಗಳ ನಡುವೆ ದ್ವೇಷ ಸೃಷ್ಟಿಯಾಗುತ್ತಿರುವ ಕುರಿತು ಉದಾಹರಣೆಗಳೊಂದಿಗೆ ವಿವರಿಸಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ತಿಮ್ಮಪ್ಪ ಅವರು ಮಾತನಾಡಿ, ಜಮಾಅತೆ ಇಸ್ಲಾಮಿ ಹಿಂದ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ನಡುವೆ ಇರುವ ಸೌಹಾರ್ದ ಸಂಬಂಧ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಪರಸ್ಪರ ಸಹಕಾರ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಫ. ಸುಲ್ತಾನ್ ಬೇಗ್ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಅಮೀರ್ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು, ಮಹಿಳೆಯರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
