ಶಿವಮೊಗ್ಗ/ತೀರ್ಥಹಳ್ಳಿ: “ನಾನು ಜನರ ಭಾವನೆಗಳ ಮೇಲೆ ರಾಜಕಾರಣ ಮಾಡಲು ಬಂದಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡಲು ಬಂದಿದ್ದೇನೆ. ರೈತರನ್ನು ರಕ್ಷಿಸಿ, ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ನಾನೇ ಖುದ್ದಾಗಿ ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ತೀರ್ಥಹಳ್ಳಿಯಲ್ಲಿ ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಂವಾದ ಸಭೆಯಲ್ಲಿ ರೈತರು ಹಾಗೂ ಜನಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಮಲೆನಾಡಿನ ರೈತರ ಭೂಮಿ ಹಕ್ಕು, ಕಸ್ತೂರಿ ರಂಗನ್ ವರದಿ, ಬಗರ್ಹುಕುಂ, ಅರಣ್ಯ ಒತ್ತುವರಿ ಹಾಗೂ ಪರಿಸರ ಸೂಕ್ಷ್ಮ ವಲಯ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.
ರೈತರಿಗೆ ಹೊಸ ನೋಟಿಸ್ ಬೇಡ: ಮಲೆನಾಡಿನ ರೈತರು ತಲೆತಲಾಂತರಗಳಿಂದ ಸಾಂಪ್ರದಾಯಿಕವಾಗಿ ಉಳುಮೆ ಮಾಡಿಕೊಂಡು ಬಂದಿರುವ ಜಮೀನು ಹಾಗೂ ನಿರ್ಮಿಸಿಕೊಂಡಿರುವ ಮನೆಗಳಿಗೆ ಯಾವುದೇ ಕಾರಣಕ್ಕೂ ತೊಂದರೆ ನೀಡಬಾರದು ಎಂದು ಡಿಕೆಶಿ ಸೂಚಿಸಿದರು.
ಯಾವುದೇ ರೈತನಿಗೆ ಹೊಸದಾಗಿ ಅರಣ್ಯ ಇಲಾಖೆಯಿಂದ ನೋಟಿಸ್ ಜಾರಿ ಮಾಡಬಾರದು ಎಂದು ಸಭೆಯಲ್ಲಿದ್ದ ಅರಣ್ಯ ಸಚಿವರು ಹಾಗೂ ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ (PCCF) ಖಡಕ್ ಸೂಚನೆ ನೀಡಿದರು.
ಅದೇ ವೇಳೆ, ರೈತರೂ ಕೂಡ ಹೊಸದಾಗಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಲು ಮುಂದಾಗಬಾರದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಪಕ್ಷಗಳ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಪಕ್ಷಾತೀತವಾಗಿ ನಾಯಕರು ಭಾಗವಹಿಸಿದ್ದು, ಮಲೆನಾಡಿನ ರೈತರ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.
