ಭದ್ರಾವತಿ: ನಗರದ ಹೊಸಮನೆ ಹಿಂದೂ ಮಹಾಸಭಾ–ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ 54ನೇ ವರ್ಷದ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ಮಂಗಳವಾರ ಅದ್ಧೂರಿಯಾಗಿ ನಡೆಯಿತು. ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ಹೊಸಮನೆ ಶ್ರೀ ಗಣಪತಿ ದೇವಸ್ಥಾನದಲ್ಲಿ ಸೆ.14ರಂದು ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗೆ ಒಂಭತ್ತು ದಿನಗಳ ಕಾಲ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಮಂಗಳವಾರ ಮಧ್ಯಾಹ್ನ ಸಂಸದ ಬಿ.ವೈ. ರಾಘವೇಂದ್ರ, ಕರ್ನಾಟಕ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಬಿ.ಕೆ. ಶಿವಕುಮಾರ್ ಹಾಗೂ ಹಿಂದೂ ಮಹಾಸಭಾ–ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಸೇರಿದಂತೆ ಗಣ್ಯರು ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆ ಸಾಗಿದ ಮಾರ್ಗದುದ್ದಕ್ಕೂ ವಿವಿಧ ಸಂಘ-ಸಂಸ್ಥೆಗಳು ಹಾಗೂ ಭಕ್ತರು ಅನ್ನಸಂತರ್ಪಣೆ, ಪುಳಿಯೋಗರೆ, ಮೊಸರನ್ನ, ಹೋಳಿಗೆ, ಮೈಸೂರು ಪಾಕು, ಲಾಡು, ರೊಟ್ಟಿ–ಎಣಗಾಯಿ ಪಲ್ಯ, ತಂಪು ಪಾನೀಯ ಹಾಗೂ ಕುಡಿಯುವ ನೀರನ್ನು ವಿತರಿಸಿದರು.
ಮೆರವಣಿಗೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದ್ದರು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಚನ್ನಪ್ಪ, ಮಣಿ, ಬಿಜೆಪಿ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮುಖಂಡರಾದ ಮಂಗೋಟೆ ರುದ್ರೇಶ್, ಜಿ. ಆನಂದ, ಆಶಾ, ಪ್ರೇಮ, ಜೆಡಿಎಸ್ನ ಗೀತಾ ಸತೀಶ್, ಮಹಾಸಭಾದ ಟಿ.ಎಸ್. ಭವಾನಿಕುಮಾರ್, ಸುದೀಪ್, ಮಂಜುನಾಥ, ಆರ್. ರಾಮಮೂರ್ತಿ, ಪಿ.ಹೆಚ್. ಜಗದೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
