Trending

ಶರಾವತಿ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್‌: ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

Spread the love

ಸೊರಬ : ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಸೊರಬದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಅಂತಿಮ ಹಂತದ ಸಭೆ ನಡೆಸಿದರು.

ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರಸ್ತಾವನೆಗೆ ಬೇಕಾದ ಎಲ್ಲ ದಾಖಲೆಗಳು ಹಾಗೂ ಮಾಹಿತಿಯನ್ನು ಸಮಗ್ರವಾಗಿ ಸಿದ್ಧಪಡಿಸಿ, ನಿಯಮಾನುಸಾರ ಶೀಘ್ರ ಕೇಂದ್ರ ಸರ್ಕಾರಕ್ಕೆ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅರಣ್ಯ ಭೂಮಿ ಡಿ-ನೋಟಿಫಿಕೇಶನ್‌ ಪ್ರಕ್ರಿಯೆ, ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಬೇಕಾದ ಅಂಶಗಳು ಹಾಗೂ ಕೇಂದ್ರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆಯಲ್ಲಿ ಒಳಗೊಂಡಿರಬೇಕಾದ ದಾಖಲೆಗಳ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು.

ಶರಾವತಿ ಮುಳುಗಡೆ ಸಂತ್ರಸ್ತರ ಬಹುದಿನಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಸ್ತಾವನೆ ಸಿದ್ಧಪಡಿಸುವಾಗ ಯಾವುದೇ ಪ್ರಮುಖ ಅಂಶಗಳು ಅಥವಾ ದಾಖಲೆಗಳು ಬಾಕಿ ಉಳಿಯದಂತೆ ಎಚ್ಚರಿಕೆ ವಹಿಸುವಂತೆ ಸಚಿವರು ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಸಿಸಿಎಫ್ ಹನುಮಂತಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಡಿಎಫ್‌ಒ ಅಜ್ಜಯ್ಯ, ಎಡಿಸಿ ಅಭಿಷೇಕ್, ವಕೀಲ ರಮೇಶ್ ಹೆಗ್ಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

[pj-news-ticker]