ಶಿವಮೊಗ್ಗ, : ಶಿವಮೊಗ್ಗದ ಕುವೆಂಪು ನಗರ ಬಡಾವಣೆಯಲ್ಲಿ ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಅಂದಾಜು ₹6 ಕೋಟಿ ಮೌಲ್ಯದ 35 ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಲೇಔಟ್ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಸ್ಥಳೀಯ ನಿವಾಸಿಗಳ ದೂರಿನ ಮೇರೆಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಜಿ. ಮಧುಸೂದನ್ ಹಾಗೂ ಆಯುಕ್ತ ಬಿ.ಆರ್. ಮಂಜುನಾಥ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರಾಧಿಕಾರದ ದಾಖಲೆಗಳನ್ನು ಪರಿಶೀಲಿಸಿ, ಸ್ಥಳೀಯ ನಿವಾಸಿಗಳಿಂದ ಅಹವಾಲು ಸ್ವೀಕರಿಸಿದರು.
**ದಾಖಲೆ ಪರಿಶೀಲನೆಯಲ್ಲಿ ಆರೋಪಕ್ಕೆ ಪುಷ್ಟಿ**
ಪ್ರಾಧಿಕಾರದ ಅಧ್ಯಕ್ಷ ಸಿ.ಜಿ. ಮಧುಸೂದನ್ ಮಾತನಾಡಿ, ಕುವೆಂಪು ನಗರದಲ್ಲಿ ಪ್ರಾಧಿಕಾರಕ್ಕೆ ಸೇರಿದ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಬಡಾವಣೆ ಅಭಿವೃದ್ಧಿಪಡಿಸುತ್ತಿದ್ದಾರೆ ಎಂದು ಸ್ಥಳೀಯರು ದೂರು ನೀಡಿದ್ದರು.
ಜಾಗವನ್ನು ಒತ್ತುವರಿಯಿಂದ ತೆರವುಗೊಳಿಸಿ ಪ್ರಾಧಿಕಾರದ ವಶಕ್ಕೆ ಪಡೆಯುವಂತೆ ಮನವಿ ಮಾಡಿದ್ದರು. ಕಚೇರಿ ದಾಖಲೆಗಳನ್ನು ಪರಿಶೀಲಿಸಿದಾಗ ಆರೋಪದಲ್ಲಿ ಸತ್ಯಾಂಶ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.
ಜಾಗವನ್ನು ಪ್ರಾಧಿಕಾರದ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಾಧಿಕಾರದ ಆಯುಕ್ತ ಬಿ.ಆರ್. ಮಂಜುನಾಥ್ ಮಾತನಾಡಿ, ಪರಿಶೀಲನೆಗೆ ಒಳಪಟ್ಟಿರುವ ಜಾಗವು ಪ್ರಾಧಿಕಾರಕ್ಕೆ ಸೇರಿದ್ದು, ಸುಮಾರು 35 ಗುಂಟೆ ಜಾಗ ಒತ್ತುವರಿಯಾಗಿರುವ ಶಂಕೆಯಿದೆ. ಇದರ ಅಂದಾಜು ಮೌಲ್ಯ ₹6 ಕೋಟಿ. ಮತ್ತೊಮ್ಮೆ ಸರ್ವೇ ನಡೆಸಿ, ಪ್ರಾಧಿಕಾರಕ್ಕೆ ಸೇರಿದ ಜಾಗವನ್ನು ವಶಕ್ಕೆ ಪಡೆಯಲಾಗುವುದು ಎಂದು ಹೇಳಿದರು.
ಪ್ರಾಧಿಕಾರಕ್ಕೆ ಸೇರಿದ ಜಾಗವನ್ನು ಯಾರೇ ಒತ್ತುವರಿ ಮಾಡಿಕೊಂಡಿದ್ದರೂ ಕ್ರಮ ಕೈಗೊಳ್ಳಲಾಗುವುದು. ಅನಧಿಕೃತ ಲೇಔಟ್ ನಿರ್ಮಿಸುವವರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಕಾರ್ಪೊರೇಟರ್ ಧೀರರಾಜ್ ಹೊನ್ನವಿಲೆ, ನಗರಾಭಿವೃದ್ಧಿ ಪ್ರಾಧಿಕಾರದ ಟಿಪಿಎಂ ಅಭಿಲಾಷ್, ಸರ್ವೇಯರ್ ಸೇರಿದಂತೆ ಇತರರು ಉಪಸ್ಥಿತರಿದ್ದರು..
