Trending

ಎಸ್‌ಐಆರ್ ವಿರುದ್ಧದ ಹೋರಾಟದಿಂದ ಯುವಕರ ದಾರಿ ತಪ್ಪಿಸುವ ಕೆಲಸ: ಮಾ. ನಾಗರಾಜ್

Spread the love

ಭದ್ರಾವತಿ : ಭಾರತೀಯ ಚುನಾವಣಾ ಆಯೋಗ ಕೈಗೊಳ್ಳುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಸಾಂವಿಧಾನಿಕ ಪ್ರಕ್ರಿಯೆಯಾಗಿದ್ದು, ಇದರ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿವೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮಾ. ನಾಗರಾಜ್ ಆರೋಪಿಸಿದರು.

ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೂ ಎಸ್‌ಐಆರ್ ಪ್ರಕ್ರಿಯೆ ನಡೆದಿದ್ದು, ಈಗಲೂ ಅದೇ ಪ್ರಕ್ರಿಯೆ ಮುಂದುವರಿದಿದೆ. ಆದರೆ, ರಾಹುಲ್ ಗಾಂಧಿ ಅಧಿಕಾರದ ಆಸೆಯಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಚುನಾವಣಾ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದರ ವಿರುದ್ಧ ಪ್ರತಿಭಟನೆ ನಡೆಸುವುದು ಸರಿಯಲ್ಲ. ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಆಕ್ಷೇಪಗಳಿದ್ದರೆ ನ್ಯಾಯಾಲಯದ ಮೊರೆ ಹೋಗಿ ನ್ಯಾಯ ಪಡೆಯಬೇಕು. ಚುನಾವಣೆ ನಡೆಯುವ ಕ್ಷೇತ್ರಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಅರಿತು ಪರಿಹರಿಸುವತ್ತ ಕಾಂಗ್ರೆಸ್ ನಾಯಕರು ಗಮನ ಹರಿಸಬೇಕು ಎಂದರು.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಸ್ಥಳ ಬದಲಾವಣೆ ಮಾಡಿಕೊಂಡವರು ಹಾಗೂ ಮೃತಪಟ್ಟವರ ಹೆಸರುಗಳನ್ನು ಪರಿಶೀಲಿಸುವುದು ಅಗತ್ಯವಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸುವುದು ಸುಲಭವಾದರೂ, ಹೆಸರು ತೆಗೆದುಹಾಕುವ ಪ್ರಕ್ರಿಯೆ ಅಷ್ಟು ಸುಲಭವಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಜನರಿಗೆ ತಪ್ಪು ಸಂದೇಶ ನೀಡುತ್ತಿದೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದ್ದು, ಭಾರತದ ಆರ್ಥಿಕ ಬೆಳವಣಿಗೆ ಉತ್ತಮವಾಗಿದೆ. ಜಾಗತಿಕ ಆರ್ಥಿಕ ಪರಿಸ್ಥಿತಿಯ ನಡುವೆಯೂ ಭಾರತ ಪ್ರಗತಿ ಸಾಧಿಸುತ್ತಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರ ಅಧ್ಯಕ್ಷ ಜಿ. ಧರ್ಮಪ್ರಸಾದ್, ಗ್ರಾಮಾಂತರ ಅಧ್ಯಕ್ಷ ಕೆ.ಎಚ್. ತೀರ್ಥಯ್ಯ, ಕೂಡ್ಲಿಗೆರೆ ಹಾಲೇಶ್, ಬಿ.ಜಿ. ರಾಮಲಿಂಗಯ್ಯ, ಎಂ.ಎಸ್. ಸುರೇಶಪ್ಪ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

[pj-news-ticker]