Trending

ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಹೊಸ ಆಧಾರ್ ಸೇವಾ ಕೇಂದ್ರ ಲೋಕಾರ್ಪಣೆ

Spread the love

ಶಿವಮೊಗ್ಗ: ಸಾರ್ವಜನಿಕರಿಗೆ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಸೇವೆಗಳನ್ನು ಸುಲಭವಾಗಿ ಮತ್ತು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಶಿವಮೊಗ್ಗದಲ್ಲಿ ಹೊಸ ಆಧಾರ್ ಸೇವಾ ಕೇಂದ್ರ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಡಾ. ಮೈತ್ರಿ ತಿಳಿಸಿದರು.

ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ವತಿಯಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮೊದಲ ಮಹಡಿಯಲ್ಲಿ ಸ್ಥಾಪಿಸಿರುವ ಹೊಸ ಮಾದರಿಯ ಆಧಾರ್ ಸೇವಾ ಕೇಂದ್ರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕರು ಆಧಾರ್ ಕಾರ್ಡ್‌ಗೆ ಸಂಬಂಧಿಸಿದ ಅಗತ್ಯ ನೋಂದಣಿ, ತಿದ್ದುಪಡಿ ಸೇರಿದಂತೆ ವಿವಿಧ ಸೇವೆಗಳನ್ನು ಈ ಕೇಂದ್ರದಲ್ಲಿ ಪಡೆಯಬಹುದು. ಆಧಾರ್ ಸೇವೆಗಳನ್ನು ಜನಸ್ನೇಹಿಯಾಗಿ ಒದಗಿಸುವ ಮೂಲಕ ಸಾರ್ವಜನಿಕರ ಸಮಯ ಉಳಿತಾಯವಾಗಬೇಕು. ಅಧಿಕಾರಿಗಳು ಯಾವುದೇ ವಿಳಂಬವಿಲ್ಲದೆ ಸೇವೆಗಳನ್ನು ಸಮರ್ಪಕವಾಗಿ ನಿರ್ವಹಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸೂಚಿಸಿದರು.

ಶಿವಮೊಗ್ಗ ನಗರದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಶೈಕ್ಷಣಿಕ ಸಂಸ್ಥೆಗಳು ಹಾಗೂ ಕೈಗಾರಿಕಾ ವಲಯಗಳ ಬೆಳವಣಿಗೆಯಿಂದಾಗಿ ಆಧಾರ್ ನೋಂದಣಿ ಮತ್ತು ನವೀಕರಣ ಸೇವೆಗಳಿಗೆ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಕೇಂದ್ರ ಆರಂಭಿಸಿರುವುದರಿಂದ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗಳು ಸುಲಭವಾಗಿ ಲಭ್ಯವಾಗಲಿದ್ದು, ನಗರದ ಇತರ ಆಧಾರ್ ಕೇಂದ್ರಗಳ ಮೇಲಿನ ಒತ್ತಡವೂ ಕಡಿಮೆಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಯುಐಡಿಎಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಉಪನಿರ್ದೇಶಕಿ ಪ್ರಿಯಾ ಶ್ರೀಕುಮಾರ್, ಯೋಜನಾ ವ್ಯವಸ್ಥಾಪಕ ರಿಕೇಶ್ ಕುಮಾರ್, ಸಹಾಯಕ ವ್ಯವಸ್ಥಾಪಕ ಪ್ರಸಾದ್ ಬಾಬು, ಬಿಎಲ್‌ಎಸ್ ಇಂಟರ್‌ನ್ಯಾಷನಲ್‌ನ ಕ್ಲಸ್ಟರ್ ವ್ಯವಸ್ಥಾಪಕ ಶ್ಯಾಮ್ ಸುಂದರ್ ಹಾಗೂ ಆಧಾರ್ ಜಿಲ್ಲಾ ಸಂಯೋಜಕ ಸತೀಶ್ಚಂದ್ರ ಉಪಸ್ಥಿತರಿದ್ದರು.

[pj-news-ticker]