ಶಿವಮೊಗ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳವನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.
ಧರಣಿಗೂ ಮುನ್ನ ನಗರದ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದ ಕಾರ್ಯಕರ್ತರು, ಸರ್ಕಾರದ ಗಮನ ಸೆಳೆಯಲು ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಎಸ್ಎಸ್ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನದ ಒಂಬತ್ತನೇ ಪರಿಚ್ಛೇದದ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸರ್ವಪಕ್ಷಗಳ ನಿಯೋಗದೊಂದಿಗೆ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.
ನಾಗಮೋಹನ್ದಾಸ್ ಆಯೋಗದ ವರದಿ ಆಧರಿಸಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸಲಾಗಿತ್ತು. ಇದರಿಂದ ಒಟ್ಟು ಮೀಸಲಾತಿ ಪ್ರಮಾಣ ಶೇ.56ಕ್ಕೆ ಏರಿಕೆಯಾಗಿತ್ತು. ಆದರೆ, ಅಕ್ಟೋಬರ್ 12ರಂದು ಹೈಕೋರ್ಟ್ ಈ ಹೆಚ್ಚಳವನ್ನು ರದ್ದುಗೊಳಿಸಿರುವುದು ಸಮುದಾಯಗಳಿಗೆ ಹಿನ್ನಡೆಯಾಗಿದೆ ಎಂದು ತಿಳಿಸಿದರು.
ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು, ಅವರ ಜನ್ಮದಿನ ಜೂನ್ 9ನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕು. ನಿವೇಶನ ಮತ್ತು ವಸತಿ ರಹಿತರಿಗೆ ಸೌಲಭ್ಯ ಕಲ್ಪಿಸಬೇಕು. ಬಗರ್ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದ ದುರ್ಬಳಕೆ ತಡೆಯಬೇಕು ಎಂದು ಆಗ್ರಹಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಬೇಕು. ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಿ ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು. ದೇವದಾಸಿ ಮತ್ತು ವಿಧವಾ ಮಹಿಳೆಯರ ಮಾಸಾಶನವನ್ನು 5 ಸಾವಿರ ರೂ.ಗೆ ಹೆಚ್ಚಿಸಬೇಕು. ವಿದ್ಯಾರ್ಥಿಗಳ ಹಾಸ್ಟೆಲ್ ಭೋಜನ ವೆಚ್ಚವನ್ನು 3 ಸಾವಿರ ರೂ.ಗೆ ಏರಿಸಬೇಕು ಸೇರಿದಂತೆ ಒಟ್ಟು 15 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಎಂ. ಏಳುಕೋಟಿ, ಜಿಲ್ಲಾ ಸಂಘಟನಾ ಸಂಚಾಲಕ ಬೊಮ್ಮನಕಟ್ಟೆ ಕೃಷ್ಣ, ಮಂಡಗಳಲೆ ನಾರಾಯಣ, ರಮೇಶ್ ಚಿಕ್ಮರಡಿ, ಹರಿಗೆ ರವಿ, ಹಸ್ವಿ ಬಸವರಾಜ್, ಅತ್ತಿಗುಂದ ಕರಿಯಪ್ಪ, ಗೋಪಿ, ಚಂದ್ರಪ್ಪ, ಯಡವಾಲ ಹನುಮತಪ್ಪ, ಬಸಪ್ಪ, ರಾಜಶೇಖರ ಸೇರಿದಂತೆ ಸಮಿತಿಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
