ಭದ್ರಾವತಿ: ಮಾದಕ ವಸ್ತು, ಮದ್ಯಪಾನ ಮತ್ತು ತಂಬಾಕು ಸೇವನೆಯಂತಹ ದುಶ್ಚಟಗಳಿಂದ ಯುವಜನರನ್ನು ದೂರವಿಟ್ಟು ಆರೋಗ್ಯವಂತ ಸಮಾಜ ನಿರ್ಮಿಸುವ ಉದ್ದೇಶದಿಂದ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಕರ್ನಾಟಕ ಘಟಕ ರಾಜ್ಯಾದ್ಯಂತ ವಿಶೇಷ ಜಾಗೃತಿ ಅಭಿಯಾನ ಆರಂಭಿಸಲು ಮುಂದಾಗಿದೆ ಎಂದು ಸಂಘದ ನೂತನ ರಾಜ್ಯಾಧ್ಯಕ್ಷ ಡಾ. ಹರೀಶ ದೇಲಂತಬೆಟ್ಟು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವೈದ್ಯರ ನಡಿಗೆ–ನಶಾಮುಕ್ತ ಸಮಾಜದ ಕಡೆಗೆ’ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ರೂಪಿಸಲಾಗಿದೆ. ವ್ಯಸನದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರ ಜೊತೆಗೆ ಯುವಜನರನ್ನು ದುಶ್ಚಟಗಳಿಂದ ರಕ್ಷಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು.
ಇಂದಿನ ದಿನಗಳಲ್ಲಿ ಯುವಜನರಲ್ಲಿ ಮಾನಸಿಕ ಒತ್ತಡ ಹಾಗೂ ಭಾವನಾತ್ಮಕ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾನಸಿಕ ಆರೋಗ್ಯದ ಬಗ್ಗೆಯೂ ವಿಶೇಷ ಗಮನ ಹರಿಸಲಾಗುವುದು. ಒತ್ತಡವನ್ನು ಸಮರ್ಥವಾಗಿ ಎದುರಿಸುವುದು, ಭಾವನಾತ್ಮಕ ಸ್ಥಿರತೆ ಕಾಪಾಡಿಕೊಳ್ಳುವುದು ಮತ್ತು ಉತ್ತಮ ಜೀವನಶೈಲಿ ರೂಪಿಸಿಕೊಳ್ಳುವ ಕುರಿತು ಜಾಗೃತಿ ಮೂಡಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಅವರು, ಯಾವುದೇ ಅರ್ಹತೆ ಇಲ್ಲದೆ ವೈದ್ಯಕೀಯ ಚಿಕಿತ್ಸೆ ನೀಡುವವರು ಜನರ ಆರೋಗ್ಯಕ್ಕೆ ಅಪಾಯ ಉಂಟುಮಾಡುತ್ತಿದ್ದಾರೆ. ಇಂತಹವರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ವೈದ್ಯಕೀಯ ಸೇವೆ ಸಲ್ಲಿಸುವ ವೈದ್ಯರ ಮೇಲೆ ರೋಗಿಗಳ ಸಂಬಂಧಿಕರು ಹಲ್ಲೆ ನಡೆಸುವುದು ಹಾಗೂ ಆಸ್ಪತ್ರೆಗಳಿಗೆ ಹಾನಿ ಮಾಡುವ ಘಟನೆಗಳು ಆತಂಕಕಾರಿಯಾಗಿವೆ. ವೈದ್ಯರು ಮತ್ತು ಆಸ್ಪತ್ರೆಗಳ ಸುರಕ್ಷತೆ ದೃಷ್ಟಿಯಿಂದ ಇಂತಹ ಕೃತ್ಯ ಎಸಗುವವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಲು ಪ್ರಸ್ತುತ ಕಾನೂನುಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಐಎಂಎ ಪದಾಧಿಕಾರಿಗಳಾದ ಡಾ. ಸುಶಿತ್ ಶೆಟ್ಟಿ, ಡಾ. ಅರುಣ್ ಜಿ.ಎಸ್. ಮತ್ತು ಡಾ. ನಿತಿನ್ ಕೆ.ಜಿ. ಉಪಸ್ಥಿತರಿದ್ದರು.
