ಬೀದರ್: ಬಸವಕಲ್ಯಾಣದಲ್ಲಿ ನಡೆಯುತ್ತಿರುವ 47ನೇ ಅನುಭವ ಮಂಟಪ ಉತ್ಸವದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಭಾರಿ ಗದ್ದಲ ಉಂಟಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾರ್ಯಕ್ರಮದಿಂದ ಅರ್ಧಕ್ಕೆ ನಿರ್ಗಮಿಸಿದ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್ 28ರಿಂದ ಎರಡು ದಿನಗಳ ಕಾಲ ನಡೆಯಲಿರುವ 47ನೇ ಅನುಭವ ಮಂಟಪ ಉತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದರು. ಬಳಿಕ ಅವರು ಉದ್ಘಾಟನಾ ಭಾಷಣ ಮಾಡುತ್ತಿದ್ದ ವೇಳೆ ಧರ್ಮದ ವಿಚಾರವಾಗಿ ವಿವಾದ ಭುಗಿಲೆದ್ದಿತು.
ಭಾಷಣದ ವೇಳೆ ‘ಲಿಂಗಾಯತ ಪ್ರತ್ಯೇಕ ಧರ್ಮ ಬೇಡ, ನಾವೆಲ್ಲರೂ ಹಿಂದೂಗಳು’ ಎಂದು ವಿಜಯೇಂದ್ರ ಹೇಳುತ್ತಿದ್ದಂತೆ ಸಭೆಯಲ್ಲಿದ್ದ ಬಸವಾಭಿಮಾನಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಬೇಕು ಎಂದು ಘೋಷಣೆ ಕೂಗುತ್ತಾ ವಿಜಯೇಂದ್ರ ಅವರ ಭಾಷಣಕ್ಕೆ ಅಡ್ಡಿಪಡಿಸಿದರು.
ಈ ವೇಳೆ ವೇದಿಕೆಯ ಮುಂಭಾಗದಲ್ಲಿ ಮಾತಿನ ಚಕಮಕಿ ನಡೆದು, ಗದ್ದಲದ ವಾತಾವರಣ ನಿರ್ಮಾಣವಾಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮ್ಮ ಭಾಷಣ ಮೊಟಕುಗೊಳಿಸಿ ಕಾರ್ಯಕ್ರಮದಿಂದ ಅರ್ಧಕ್ಕೆ ನಿರ್ಗಮಿಸಿದರು.
