ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಾರ್ಚ್ 21ರಂದು ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಏಪ್ರಿಲ್ 29ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಇಂದು ಆದೇಶ ನೀಡಿದ್ದು, ಇದರಿಂದ ಕೇಜ್ರಿವಾಲ್ ಜೈಲುವಾಸ ಮುಂದುವರಿದಂತಾಗಿದೆ.
ಏಪ್ರಿಲ್ 9ರಂದು ಕೇಜ್ರಿವಾಲ್ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ್ದು, ಇದನ್ನು ಪ್ರಶ್ನಿಸಿ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಪೀಠದ ಜಸ್ಟೀಸ್ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರು ಇಂದು ಅರ್ಜಿಯ ವಿಚಾರಣೆ ನಡೆಸುತ್ತಿದ್ದಂತೆ ಈ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.
ಪ್ರಸ್ತುತ ಅರವಿಂದ್ ಕೇಜ್ರಿವಾಲ್ ಕಳೆದ 14ದಿನಗಳಿಂದ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಸೋಮವಾರ ಅವಧಿ ಮುಕ್ತಾಯಗೊಳ್ಳಲಿದೆ.
ಕೇಜ್ರಿವಾಲ್ ಪರವಾಗಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿ, ಆಧಾರರಹಿತ ಸಾಕ್ಷ್ಯಾಧಾರಗಳ ಮೂಲಕ ತಮ್ಮ ಕಕ್ಷಿದಾರರನ್ನು ಬಂಧಿಸಿರುವುದಾಗಿ ತಿಳಿಸಿದ್ದರು.