ಮುಂಬಯಿ: ಬಾಲಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ್ದ ಸಿಐಎಸ್‌ಎಫ್ ಮಹಿಳಾ ಸಿಬ್ಬಂದಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಘಟನೆ ಬಳಿಕ ಸಿಐಎಸ್‌ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಆದರೆ ಇದೀಗ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವರ್ಗಾವಣೆ ಎಂದು ವರದಿ ತಿಳಿಸಿದೆ.
2024ರ ಜೂನ್ 7ರಂದು ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಚಂಡೀಗಢ್‌ನಿಂದ ದೆಹಲಿಗೆ ಹೊರಟಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯದಲ್ಲಿದ್ದ ಕುಲ್ವಿಂದರ್ ಕಂಗನಾ ಅವರಿಗೆ ಕಪಾಳಮೋಕ್ಷ ಮಾಡಿದ್ದರು.
ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆಯ ಸಂದರ್ಭದಲ್ಲಿ ರೈತರ ಬಗ್ಗೆ ಅಗೌರವ ರೀತಿಯಲ್ಲಿ ಕಂಗನಾ ಮಾತನಾಡಿದ್ದರು ಆ ಕಾರಣದಿಂದ ಕಪಾಳಮೋಕ್ಷ ಮಾಡಿದ್ದೇನೆ ಎಂದು ಕುಲ್ವಿಂದರ್ ಹೇಳಿಕೆ ನೀಡಿದ್ದರು.
ಪ್ರಕರಣ ಸಂಬಂಧ ಸೇವೆಯಿಂದ ಅಮಾನತುಗೊಳಿಸಿ, ವಿಶೇಷ ತನಿಖಾದಳ ತಂಡವನ್ನು ರಚಿಸಲಾಗಿತ್ತು. ತನಿಖೆ ನಡೆಸಿದ ಎಸ್ ಐಟಿ ತಂಡ ವರದಿಯನ್ನು ಉನ್ನತ ಅಧಿಕಾರಿಗಳಿಗೆ ಸಲ್ಲಿಕೆ ಮಾಡಿತ್ತು.
ಬೆಂಗಳೂರಿಗೆ ವರ್ಗಾವಣೆ ಮಾಡಿದ್ದಾರೆ ಎನ್ನುವ ಸುದ್ದಿ ಹೊರಬಿದ್ದ ಬಳಿಕ ಈ ಬಗ್ಗೆ ಸಿಐಎಸ್‌ಎಫ್ ಸ್ಪಷ್ಟನೆ ನೀಡಿದೆ.
ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರು ಇನ್ನೂ ಅಮಾನತುನಲ್ಲಿದ್ದು,, ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಯುತ್ತಿದೆ ಎಂದು ಸಿಐಎಸ್‌ಎಫ್ ಹೇಳಿರುವುದಾಗಿ ʼಎಎನ್ ಐʼ ಸುದ್ದಿ ಸಂಸ್ಥೆ ವರದಿ ಮಾಡಿದೆ.