ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿಯೇ ಅತ್ಯಂತ ಹಿಂದುಳಿದ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠ, SC, ST ಒಳ ಮೀಸಲಾತಿಗೆ ಒಪ್ಪಿಗೆ ನೀಡಿದೆ. ಹೆಚ್ಚು ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಎಸ್‌ಸಿ ಮತ್ತು ಎಸ್‌ಟಿಗಳಲ್ಲಿಯೇ ಒಳ ಮೀಸಲಾತಿ ನೀಡಬಹುದು ಮತ್ತು ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಈ ಮೀಸಲಾತಿ ಜಾರಿಗೆ ತರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಏಳು ನ್ಯಾಯಮೂರ್ತಿಗಳ ಆರು ನ್ಯಾಯಮೂರ್ತಿಗಳು ಒಳಮೀಸಲಾತಿಯ ಪರವಾಗಿ ತೀರ್ಪು ನೀಡಿದ್ದು, ಒಬ್ಬರು ಮಾತ್ರ(ನ್ಯಾ. ಬೇಲಾ ತ್ರಿವೇದಿ) ಒಳ ಮೀಸಲಾತಿ ವಿರುದ್ಧವಾಗಿ ತೀರ್ಪು ನೀಡಿದ್ದಾರೆ. ಹಾಗಾಗಿ 6:1 ರ ಅನುಪಾತದಡಿ, ಉಪವರ್ಗೀಕರಣ ಆಧಾರಿತ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಈ ಬಹುಮತದ ತೀರ್ಪು ಈ ಹಿಂದೆ ಒಳ ಮೀಸಲಾತಿಯನ್ನು ತಿರಸ್ಕರಿಸಿದ್ದ ಇವಿ ಚಿನ್ನಯ್ಯ ವರ್ಸಸ್ ಆಂಧ್ರಪ್ರದೇಶ ಪ್ರಕರಣದಲ್ಲಿ ಐವರು ನ್ಯಾಯಾಧೀಶರ ಸಂವಿಧಾನ ಪೀಠ ನೀಡಿದ್ದ 2004 ರ ತೀರ್ಪನ್ನು ರದ್ದುಗೊಳಿಸಿದೆ.
ಮೀಸಲಾತಿ ವರ್ಗದ ಸಮುದಾಯಗಳ ಒಳ ಮೀಸಲಾತಿ ಒಳಗೊಂಡಿರುವ ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ(ಸೇವೆಗಳಲ್ಲಿ ಮೀಸಲಾತಿ) ಕಾಯಿದೆ, 2006 ರ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ತೀರ್ಪು ಪ್ರಕಟಿಸಿದೆ.