ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಭಾರಿ ಮಳೆಯಾಗಿದ್ದು, 1 ಸೆಂಟಿಮೀಟರ್ನಷ್ಟು ಮಳೆಯಾಗಿದೆ.
ರಾಜ್ಯದಲ್ಲಿ ಇನ್ನೂ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದಿರುವ ಹವಾಮಾನ ಇಲಾಖೆ, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಿದೆ.
ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರಗಳಲ್ಲಿಯೂ ಇಂದು ಮಳೆಯಾಗಿದೆ. ಹಾಸನದಲ್ಲಿ ಧಾರಾಕಾರ ಮಳೆಯಿಂದ 25ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದೆ. ಮಳೆ ನೀರು ನುಗ್ಗಿದ್ದರಿಂದ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಅನೇಕ ವಸ್ತುಗಳು ನಾಶವಾಗಿವೆ. ಮನೆಗೆ ನುಗ್ಗಿದ ನೀರು ಹೊರ ಹಾಕಲು ಜನ ಹರಸಾಹಸಪಡುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಕೂಡ ನೆರವಿಗೆ ಧಾವಿಸಿದ್ದಾರೆ.
ಮುಂದಿನ ವಾರಗಳಲ್ಲಿ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.