ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ತೆರಳುವಾಗ ವಿದ್ಯುತ್ ತಗುಲಿ 2ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಎಚ್. ಕಾವಲ್ ಬಳಿ ನಡೆದಿದೆ. ಹೇಮಂತ್ (8) ಮೃತ ವಿದ್ಯಾರ್ಥಿ.
ಎಚ್.ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹೇಮಂತ್ 2ನೇ ತರಗತಿ ಓದುತ್ತಿದ್ದ. ಇಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ ಶಾಲೆಗೆ ವಿದ್ಯಾರ್ಥಿ ತೆರಳಿದ್ದ. ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುವಾಗ ರಸ್ತೆ ಭಾಗದಲ್ಲಿ ಅಳವಡಿಸಿದ್ದ ವಿದ್ಯುತ್ ಕಂಬದ ವೈರ್ ತಗುಲಿ ಬಾಲಕ ಸ್ಥಳದಲ್ಲೇ ಸಾವು ಮೃತಪಟ್ಟಿದ್ದಾನೆ.
ಹಲವು ಬಾರಿ ವಿದ್ಯುತ್ ಕಂಬ ಸರಿಪಡಿಸುವಂತೆ ಕೆಇಬಿ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಆದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಕೆಇಬಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ವಿದ್ಯಾರ್ಥಿ ಸಾವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಮೃತ ಹೇಮಂತ್ ಪೋಷಕರು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಅವರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು. ಕೆಇಬಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.