ಬೆಳಗಾವಿ: ನಮ್ಮ ಸರ್ಕಾರ ಇರುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ. ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ, ನಮಗೆ ಇನ್ನೂ ನಾಲ್ಕು ವರ್ಷದ ಅಧಿಕಾರವಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಹೀಗಿರುವಾಗ ಅವರ ಬದಲಾವಣೆ ಬಗ್ಗೆ ಮಾತನಾಡುವದು ಸರಿಯಲ್ಲ ಎಂದರು.
ನಾನು ಸಿಎಂ ಸ್ಥಾನದ ಆಕಾಂಕ್ಷಿ ಅಲ್ಲ. ಸ್ವತಃ ಸಚಿವ ಸತೀಶ್ ಜಾರಕಿಹೊಳಿ ಸಹ ಇದೇ ಮಾತನ್ನು ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನ ಖಾಲಿ ಇದ್ದಾಗ ಅದನ್ನು ಕೇಳಬೇಕು. ಈಗ ಖಾಲಿ ಇಲ್ಲ ಎಂದು ದೇಶಪಾಂಡೆ ಹೇಳಿದರು.
ದೀಪಾವಳಿ ನಂತರ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಅರ್ಥವಿಲ್ಲ. ಅವರು ಸರಕಾರವನ್ನು ಅಸ್ಥಿರಗೊಳಿಸಲು ಈ ರೀತಿ ಪ್ರಯತ್ನವನ್ನು ಮಾಡುತ್ತಿದ್ದಾರೆ. ಅದು ಸಾಧ್ಯವಾಗುವುದಿಲ್ಲ ಎಂದರು.
ಮುಡಾ ಪ್ರಕರಣದಲ್ಲಿ ಯಾವುದೇ ಅವ್ಯವಹಾರವಾಗಿಲ್ಲ. ಮುಖ್ಯಮಂತ್ರಿ ಅವರ ಪತ್ನಿ ತಪ್ಪು ಹೆಜ್ಜೆ ಇಟ್ಟಿಲ್ಲ. ನ್ಯಾಯಾಲಯದಲ್ಲಿ ನಮ್ಮ ಪರವಾಗಿ ಆದೇಶ ಬರಲಿದೆ ಎಂಬ ವಿಶ್ವಾಸವಿದೆ ಎಂದರು.