ಚೆನ್ನೈ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
21 ವರ್ಷದ ಯುವತಿಯೊಬ್ಬಳು ನೃತ್ಯ ಸಂಯೋಜಕ ಜಾನಿ ಮಾಸ್ಟರ್ (ಶೇಕ್ ಜಾನಿ ಬಾಷಾ) ಮೇಲೆ ಮೇಲೆ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದಾರೆ.
ದೂರು ನೀಡಿದ ಯುವತಿ ಕೂಡ ನೃತ್ಯ ಸಂಯೋಜಕಿಯಾಗಿದ್ದು, ಕಳೆದ ಕೆಲ ತಿಂಗಳಿನಿಂದ ಈಕೆ ಜಾನಿ ಮಾಸ್ಟರ್ ಜೊತೆಗೆ ಕೆಲಸ ಮಾಡುತ್ತಿದ್ದಳು. ಜಾನಿ ಮಾಸ್ಟರ್ ಹೊರಾಂಗಣ ಚಿತ್ರೀಕರಣದ ವೇಳೆ ತನ್ನ ಮೇಲೆ ಹಲ್ಲೆ ನಡೆಸಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಯುವತಿ ದೂರಿನಲ್ಲಿ ಹೇಳಿದ್ದಾಳೆ.
ಚೆನ್ನೈ, ಮುಂಬೈ ಮತ್ತು ಹೈದರಾಬಾದ್ ಸೇರಿದಂತೆ ವಿವಿಧ ನಗರಗಳಲ್ಲಿ ಚಿತ್ರೀಕರಣದ ಸಮಯದಲ್ಲಿ ಜಾನಿ ಮಾಸ್ಟರ್ ತನ್ನ ಮೇಲೆ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅವರು ನಾರ್ಸಿಂಗಿಯಲ್ಲಿರುವ ತನ್ನ ನಿವಾಸದಲ್ಲಿ ಹಲವಾರು ಬಾರಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರೆ ಹೇಳಿದ್ದಾಳೆ.
ರಾಯದುರ್ಗದಲ್ಲಿ ಎಫ್‌ಐಆರ್ ದಾಖಲಾಗಿದ್ದು, ನಂತರ ಹೆಚ್ಚಿನ ತನಿಖೆಗಾಗಿ ನರಸಿಂಗಿ ಪೊಲೀಸರಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ.
ಜಾನಿ ಮಾಸ್ಟರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376 (ಅತ್ಯಾಚಾರ), ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), ಮತ್ತು ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿವಾದಕ್ಕೆ ಸಿಲುಕಿರುವುದು ಇದೇ ಮೊದಲಲ್ಲ. ಈ ಹಿಂದೆ ಜಾನಿ ಮಾಸ್ಟರ್ ವಿರುದ್ಧ ಆರೋಪಗಳು ಕೇಳಿ ಬಂದಿತ್ತು. ಈ ಹಿಂದೆ ಸತೀಶ್ ಎಂಬ ಡ್ಯಾನ್ಸರ್ ಜಾನಿ ಮಾಸ್ಟರ್ ವಿರುದ್ಧ ಕಿರುಕುಳದ ಆರೋಪ ಮಾಡಿ ದೂರು ದಾಖಲಿಸಿದ್ದರು. ಸಿನಿಮಾ ಚಿತ್ರೀಕರಣದಲ್ಲಿ ಕೆಲಸ ಸಿಗದಂತೆ ನೃತ್ಯ ನಿರ್ದೇಶಕರು ತಡೆಯುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು. ಆ ಬಳಿಕ ಜಾನಿ ಮಾಸ್ಟರ್ ಈ ಆರೋಪಗಳನ್ನು ತಳ್ಳಿಹಾಕಿದ್ದರು.
ಇದಲ್ಲದೆ 2015 ರಲ್ಲಿ ಕಾಲೇಜಿನಲ್ಲಿ ನಡೆದ ಗಲಾಟೆಯಿಂದಾಗಿ 2019 ರಲ್ಲಿ ಜಾನಿ ಮಾಸ್ಟರ್‌ಗೆ ಹೈದರಾಬಾದ್‌ನ ಸ್ಥಳೀಯ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿತು.
ಜಾನಿ ಮಾಸ್ಟರ್ ʼರೌಡಿ ಬೇಬಿʼ ಮತ್ತು ಇತ್ತೀಚೆಗೆ ʼಸ್ತ್ರೀ-2ʼ ಚಿತ್ರ ʼಆಯಿ ನಾಯ್ʼ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.