ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಇಬ್ಬರು ಕಾನ್‌ಸ್ಟೆಬಲ್‌ಗಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಮೂವತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮೆರವಣಿಗೆ ಸುಗಮವಾಗಿ ಸಾಗುತ್ತಿದ್ದು, ನಿನ್ನೆ ಸಂಜೆ ಚಾಮರಾಜಪೇಟೆ ವೃತ್ತದ ಬಳಿ ಸಾಗುತ್ತಿದ್ದಾಗ ಕಲ್ಲು ತೂರಾಟ ಆರಂಭವಾಯಿತು. ಕೆಲವರು ಘೋಷಣೆಗಳನ್ನು ಕೂಗಿದ್ದರಿಂದ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ಆಗ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಪೇದೆಗಳಿಗೆ ಗಾಯಗಳಾಗಿವೆ.
ಕೂಡಲೇ ಪರಿಸ್ಥಿತಿ ನಿಯಂತ್ರಿಸಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ವಿಸರ್ಜನೆಗೊಳಿಸಲಾಯಿತು. ಸೂಕ್ತ ಭದ್ರತಾ ಪಡೆಗಳನ್ನು ನಿಯೋಜಿಸಿ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಯಿತು ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಐದು ಪ್ರಕರಣಗಳನ್ನು ದಾಖಲಿಸಲಾಗಿದ್ದು 30 ಜನರನ್ನು ಬಂಧಿಸಲಾಗಿದೆ ಎಂದು ಉಮಾ ಪ್ರಶಾಂತ್ ಹೇಳಿದರು.