ಬೆಂಗಳೂರು: ರಾಜ್ಯಾದ್ಯಂತ ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ ಎಂದು ರಾಜಭವನ ಸ್ಪಷ್ಟೀಕರಣ ನೀಡಿದೆ. ವಿಧಾನ ಮಂಡಲ ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಸ್ ಕಳಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.
ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಸ್ ಕಳಿಸಲಾಗಿದೆ. ಫೆಬ್ರವರಿ 12ರಿಂದ ವಿಧಾನಮಂಡಲ ಅಧಿವೇಶನ ನಿಗದಿಯಾಗಿದೆ. ಅಧಿವೇಶನದಲ್ಲೇ ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಿ ಅನುಮೋದನೆ ಪಡೆಯುವಂತೆ ಸರ್ಕಾರಕ್ಕೆ ಸೂಚಿಸಿ ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಏನೆಂದರು?: ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಅಧಿವೇಶನ ನಿಗದಿ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ. ನಾವು ಸುಗ್ರೀವಾಜ್ಞೆ ಕಳಿಸಿದಾಗ ಅಧಿವೇಶನ ನಿಗದಿಯಾಗಿರಲಿಲ್ಲ. ಸುಗ್ರೀವಾಜ್ಞೆ ರಾಜ್ಯಪಾಲರ ಕೈಸೇರುವ ವೇಳೆಗೆ ಅಧಿವೇಶನ ನಿಗದಿಯಾಗಿದೆ. ಹೀಗಾಗಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಲಾಗುವುದು ಎಂದರು.
ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಶೇಕಡಾ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಇದು ಭಾರೀ ಕನ್ನಡಪರ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿತ್ತು.