ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದ್ದು, ಅಲ್ಲಿ 15 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಶನಿವಾರ ಸಂಜೆ ಲಾಂಗೋಲ್ ಗೇಮ್ಸ್ ಗ್ರಾಮದಲ್ಲಿ ಗುಂಪು ಘರ್ಷಣೆ ನಡೆದಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ಗುಂಪನ್ನು ಚದುರಿಸಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಭದ್ರತಾ ಸಿಬ್ಬಂದಿ ಹಲವಾರು ಸುತ್ತಿನ ಅಶ್ರುವಾಯು ಪ್ರಯೋಗಿಸಿದ್ದಾರೆ ಎಂದು ಅವರು ಹೇಳಿದರು.
ಹಿಂಸಾಚಾರದ ವೇಳೆ 45 ವರ್ಷದ ವ್ಯಕ್ತಿಯೊಬ್ಬರಿಗೆ ಗುಂಡು ಹಾರಿಸಲಾಗಿದೆ. ಎಡತೊಡೆಯ ಮೇಲೆ ಗುಂಡಿನ ಗಾಯಗಳಾಗಿದ್ದು, ಅವರನ್ನು ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಆರ್‌ಐಎಂಎಸ್) ಗೆ ದಾಖಲಿಸಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ ಪರಿಸ್ಥಿತಿ ಸುಧಾರಿಸಿದೆ. ಆದರೆ, ನಿರ್ಬಂಧಗಳು ಜಾರಿಯಲ್ಲಿವೆ ಎಂದು ಅವರು ಹೇಳಿದರು.