ಮೈಸೂರು: ಯಾವುದೇ ಟೆನ್ಷನ್ ಇಲ್ಲದೆ ವಿಚಾರಣೆ ಎದುರಿಸಿದೆ. ಮತ್ತೆ ವಿಚಾರಣೆಗೆ ಬರುವಂತೆ ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು.
ಸುಮಾರು ಎರಡು ಗಂಟೆಗಳ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಯಾವುದೇ ಟೆನ್ಷನ್ ಇಲ್ಲದೆ ವಿಚಾರಣೆ ಎದುರಿಸಿದ್ದೇನೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ನನ್ನ ಉತ್ತರಗಳನ್ನು ಅವರು ರೆಕಾರ್ಡ್ ಮಾಡಿಕೊಂಡಿದ್ದಾರೆ. ಮತ್ತೆ ವಿಚಾರಣೆಗೆ ಬರುವಂತೆ ಹೇಳಿಲ್ಲ ಎಂದರು.
ಇದೇ ವೇಳೆ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಬಿಜೆಪಿ ಬೇಡಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಯಾವುದಾದರೂ ಕೇಸ್ ಸಿಬಿಐಗೆ ಕೊಟ್ಟಿದ್ದಾರೆಯೇ? ಸಿಬಿಐ ಯಾರ ಕೈಯಲ್ಲಿದೆ. ಬಿಜೆಪಿ, ಜೆಡಿಎಸ್ ನವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ಕಾನೂನು ಪ್ರಕಾರವೇ ಸೈಟ್ ಪಡೆದುಕೊಂಡಿದ್ದೇನೆ. ನಾನು ಮತ್ತು ನನ್ನ ಕುಟುಂಬ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಎಂದರು.
ಸಿದ್ದರಾಮಯ್ಯ ಅವರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ನೇತೃತ್ವದಲ್ಲಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಸಿಎಂ ಸ್ಥಾನದಿಂದ ಕೆಳಗಿಳಿದು ತನಿಖೆ ಎದುರಿಸುವಂತೆ ಒತ್ತಾಯಿಸಿದರು.