ಹೊಸನಗರ: ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ಸೊಂದು ಅಪಘಾತಕ್ಕೆ ತುತ್ತಾಗಿ 29 ಜನರು ಗಾಯಗೊಂಡ ಘಟನೆ ಮುಂಡಳ್ಳಿ ಸಮೀಪ ನರ್ತಿಗೆ ಬಳಿ ನಡೆದಿದೆ.
ಚಾಮರಾಜನಗರ ಆಳಂದೂರು ಖಾಸಗಿ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ.
ಗಾಯಗೊಂಡವರನ್ನು ಕೂಡಲೇ ಎರಡು 108 ವಾಹನ, ನಗರದ ಆಪತ್ಬಾಂಧವ ಅಂಬುಲೆನ್ಸ್ ನಲ್ಲಿ ನಗರ ಆಸ್ಪತ್ರೆಗೆ ಸಾಗಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹೊಸನಗರ ತಾಲೂಕು ಆಸ್ಪತ್ರೆಗೆ ಹಾಗೂ ಹೆಚ್ಚು ಗಾಯಗೊಂಡವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪಂದನೆ:
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ದೌಡಾಯಿಸಿದ ಸ್ಥಳೀಯರು ಪೊಲೀಸರೊಂದಿಗೆ ಕೈಜೋಡಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಆಸ್ಪತ್ರೆಯಲ್ಲಿದ್ದ ವಿದ್ಯಾರ್ಥಿಗಳು, ಶಿಕ್ಷಕರಿಗೆ ಊಟದ ವ್ಯವಸ್ಥೆ ಮಾಡಿದರು.
ಇದೇ ವೇಳೆ ನಗರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
