Trending

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಹಲವು ಬೇಡಿಕೆಗಳ ಸಂಬಂಧ ಮನವಿ ಪತ್ರ ಸಲ್ಲಿಕೆ

Spread the love

ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ರಾಜ್ಯದ ಕೆಲ ಬೇಡಿಕೆಗಳ ಬಗ್ಗೆ ಮನವಿ ಪತ್ರ ಸಲ್ಲಿಸಿದರು.

ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ ಒದಗಿಸಿರುವ ನಬಾರ್ಡ್ ನೆರವು ಕಡಿತಗೊಳಿಸಿರುವುದರಿಂದ ರಾಜ್ಯದ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಿದೆ. 2023 -24ರ ಸಾಲಿನಲ್ಲಿ 5,600 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿತ್ತು. 2024-25ರ ಸಾಲಿನಲ್ಲಿ 2,340 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಇದರಿಂದಾಗಿ ನಬಾರ್ಡ್ ನೆರವು ಪ್ರಸಕ್ತ ಸಾಲಿನಲ್ಲಿ ಶೇ.58 ರಷ್ಟು ಕಡಿತವಾಗಿದೆ ಎಂದು ತಿಳಿಸಿದರು.

ರಾಜ್ಯವು ಹೆಚ್ಚುವರಿ ಬಡ್ಡಿ ಸಹಾಯಧನವನ್ನು ನೀಡದ ಹೊರತು, ಇದು ರಾಜ್ಯದ ರೈತಾಪಿ ವರ್ಗದ ಆರ್ಥಿಕ ವೆಚ್ಚದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೇ, ರಾಜ್ಯದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಈ ಕೂಡಲೇ ಇದನ್ನು ಪರಾಮರ್ಶಿಸಿ ನಬಾರ್ಡ್ ನೆರವು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ರಾಜ್ಯದ ರೈತರು ಅಲ್ಪಾವಧಿ ಬೆಳೆ ಸಾಲಗಳನ್ನು ಪಡೆಯಲು ಯಾವುದೇ ರೀತಿಯ ತೊಂದರೆಯಾಗದಂತೆ ತಾವು ಹಣಕಾಸು ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಸಿಎಂ ಮನವಿ ಮಾಡಿದರು.

16ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರದ ತೆರಿಗೆ ಪಾಲಿಗೆ ಹೆಚ್ಚಿನ ದೇಣಿಗೆ ಒದಗಿಸುವ ರಾಜ್ಯಗಳಿಗೆ, ಕೇಂದ್ರದ ತೆರಿಗೆ ಪಾಲಿನಲ್ಲಿ ಭಾರೀ ಕಡಿತ ಮಾಡಿ ಶಿಕ್ಷಿಸದಂತೆ, ಹಣಕಾಸು ಇಲಾಖೆ ಖಾತ್ರಿಪಡಿಸಬೇಕು. ನಮ್ಮ ಮನವಿಗೆ ಸೂಕ್ತ ಪ್ರತಿಕ್ರಿಯೆ ದೊರಕುವ ನಿರೀಕ್ಷೆ ನಮ್ಮದು ಎ‌ಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[pj-news-ticker]